×
Ad

ಪ್ರೇಮಿಗಳ ದಿನ | '#40PercentLove' ಪೋಸ್ಟರ್ ಬಿಡುಗಡೆ ಮಾಡಿದ ಕಾಂಗ್ರೆಸ್

''ಬಿಜೆಪಿಗರು ಶುದ್ಧ 40% ಪ್ರೇಮಿಗಳು''

Update: 2023-02-14 12:27 IST

ಬೆಂಗಳೂರು: ಪ್ರೇಮಿಗಳ ದಿನವಾದ ಇಂದು ವಿರೋಧ ಪಕ್ಷ ಕಾಂಗ್ರೆಸ್ @INCKarnataka ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರ ಭಾವಚಿತ್ರವುಳ್ಳ ಪೋಸ್ಟರ್ ಗಳನ್ನು (#40PercentLove) ಬಿಡುಗಡೆ ಮಾಡಿದೆ.

ಕಂದಾಯ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಭಾವಚಿತ್ರವುಳ್ಳ ಪೋಸ್ಟರ್ ಅನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ''ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!! ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ'' ಎಂದು ವ್ಯಂಗ್ಯವಾಡಿದೆ. 

''ಬಿಜೆಪಿಗರದ್ದು ಗೋ ಪ್ರೀತಿಯಲ್ಲ, Go ಪ್ರೀತಿ!! ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ'' ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ. 

ವಿಮಾನದ ಮೇಲೆ ತೇಜಸ್ವಿ ಸೂರ್ಯ!

''ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು, ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು. ಸಿಎಂ ಮನೆಗೆ ಕಲ್ಲು ಹೊಡೆಯುವುದು. ರೈತರಿಗೆ ಅವಮಾನಿಸುವುದು. ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ'' ಎಂದು ಸಂಸದ ತೇಜಸ್ವಿ ಸೂರ್ಯ ಅವರು ವಿಮಾನದ ಮೇಲೆ ಕುಳಿತಿಕೊಂಡಿರುವ ವ್ಯಂಗ್ಯ ಚಿತ್ರವನ್ನು ಪೋಸ್ಟ್ ಮಾಡಿದೆ. 

GO BACK ASHOK!

''ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ! ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು!'' ಎಂದು ಇತ್ತೀಚೆಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕಗೊಳಿಸಿದ್ದನ್ನು ವಿರೋಧಿಸಿ GO BACK ASHOK ಅಭಿಯಾನ ನಡೆಸಿದ್ದನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ. 

"ಪ್ರೀತಿ ಮಧುರ, ತ್ಯಾಗ ಅಮರ" ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ.. ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ'' ಎಂದು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಈಶ್ವರಪ್ಪ ಅವರನ್ನು ಕಾಂಗ್ರೆಸ್ ಫೋಸ್ಟರ್ ಮೂಲಕ ಕಾಳೆಲೆದಿದೆ.

Similar News