ಫೆ.20ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಡುಪಿಗೆ: ಸಮಾವೇಶ, ರೋಡ್ ಶೋ
ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೆ.20ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವರು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂದು ನಡೆದ ಬಿಜೆಪಿ ಜಿಲ್ಲಾ ಕಾರ್ಯತಂಡ ಮತ್ತು ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ಬೆಳಗ್ಗೆ 10ಗಂಟೆಗೆ ನಡೆಯುವ ಜಿಲ್ಲಾಮಟ್ಟದ ಬೂತ್ ಸಮಿತಿ ಸಮಾವೇಶದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2ಗಂಟೆಗೆ ಬೈಂದೂರಿನಲ್ಲಿ ನಡೆಯುವ ಬೃಹತ್ ವಾಹನ ಜಾಥಾದಲ್ಲಿ ಪಾಲ್ಗೊಂಡು, 2.30ಕ್ಕೆ ಮುಳ್ಳಿಕಟ್ಟೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಬೂತ್ ಸಮಿತಿ ಸಮಾವೇಶದಲ್ಲಿ ವಿಧಾನಸಭಾ ಕ್ಷೇತ್ರವಾರು ಹಾಗೂ ಗ್ರಾಪಂ ಮತ್ತು ಬೂತ್ ಸಮಿತಿಯ ಎಲ್ಲ 12 ಮಂದಿಗೆ ಸೂಕ್ತ ಆಸನದ ವ್ಯವಸ್ಥೆಯನ್ನು ಮಾಡಲಾಗುವುದು. ಈ ನಿಟ್ಟಿನಲ್ಲಿ ಎಲ್ಲ 6 ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿ ಗಳು ಮತ್ತು ಜನಪ್ರತಿನಿಧಿಗಳು ಸಂಘಟಿತರಾಗಿ ಶಕ್ತಿಕೇಂದ್ರ ಮತ್ತು ಬೂತ್ ಸಮಿತಿಗಳ ವ್ಯವಸ್ಥಿತ ಸಭೆಗಳನ್ನು ನಡೆಸಿ, ಜಿಲ್ಲೆಯ ಎಲ್ಲಾ 1,111 ಬೂತ್ ಸಮಿತಿಗಳ ತಂಡ ಪೂರ್ಣ ಪ್ರಮಾಣದಲ್ಲಿ ಸಮಾವೇಶದಲ್ಲಿ ಭಾಗವಹಿಸುವಂತೆ ನಿಗಾ ವಹಿಸಬೇಕು ಎಂದು ಅವರು ಹೇಳಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರ ಉಡುಪಿ ಜಿಲ್ಲಾ ಬೇಟಿ ಹೊಸ ಸಂಚಲನ ಸೃಷ್ಠಿಸಿ, ದೊಡ್ಡ ಸಂಘಟನಾ ಶಕ್ತಿಯ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಸಂಘಟಿತ ಪ್ರಯತ್ನದ ಮೂಲಕ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಲು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಸುಮಾರು 15,000 ಮಂದಿ ಅಪೇಕ್ಷಿತರ ಜಿಲ್ಲಾ ಬೂತ್ ಸಮಿತಿ ಸಮಾವೇಶ ದಲ್ಲಿ ಜಿಲ್ಲೆಯ ಪ್ರತಿಯೊಂದು ಬೂತ್ ಸಮಿತಿಗಳ ತಲಾ 12 ಮಂದಿ ಪ್ರಮುಖರು ಕಡ್ಡಾಯವಾಗಿ ಉಪಸ್ಥಿತರಿರಬೇಕು. ಈ ಬಗ್ಗೆ ಮಂಡಲ ಮಟ್ಟದಲ್ಲಿ ಫೆ.16ರಂದು ಕಾಪು ಮತ್ತು ಕಾರ್ಕಳ ಹಾಗೂ ಫೆ.17ರಂದು ಬೈಂದೂರು, ಕುಂದಾಪುರ, ಉಡುಪಿ ನಗರ ಮತ್ತು ಉಡುಪಿ ಗ್ರಾಮಾಂತರ ಮಂಡಲಗಳ ಪೂರ್ಣ ಪ್ರಮಾಣದ ಪೂರ್ವಸಿದ್ಧತಾ ಸಭೆಗಳನ್ನು ನಡೆಸಬೇಕು ಎಂದು ತಿಳಿಸಿದರು.
ಫೆ.26ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಪ್ರಧಾನಿ ನರೇಂದ್ರ ಮೋದಿ ಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಕಡ್ಡಾಯವಾಗಿ ವೀಕ್ಷಿಸಿ, ವಿವರ ಮತ್ತು ಫೋಟೋವನ್ನು ನಿಗದಿತ ಲಿಂಕ್ ಮೂಲಕ ಅಪ್ಲೋಡ್ ಮಾಡಬೇಕು ಎಂದು ಅವರು ತಿಳಿಸಿದರು.
ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಚುನಾವಣಾ ಉಸ್ತುವಾರಿಗಳು ಮತ್ತು ಮುಂದಿನ 5 ಅಭಿಯಾನಗಳ ಸಂಚಾಲಕರ ತಂಡವನ್ನು ಘೋಷಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ಮನೋಹರ್ ಕಲ್ಮಾಡಿ ವಂದಿಸಿದರು.