ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮವಾಹಿನಿ ಯೋಜನೆಯಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿ: ಜೆ.ಸಿ.ಮಾಧುಸ್ವಾಮಿ
ಬೆಂಗಳೂರು, ಫೆ.14: ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಪಶ್ಚಿಮವಾಹಿನಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಲಾಲಾಜಿ ಆರ್.ಮೆಂಡನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಯೋಜನೆಯಿಂದ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವುದಲ್ಲದೆ ಪರೋಕ್ಷವಾಗಿ ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿಯಾಗಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಬಹುತೇಕ ನಿವಾರಿಸಬಹುದಾಗಿದೆ ಎಂದರು.
ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲೂರು ಗ್ರಾಮದ ದಳಂತ್ರ ಕೆರೆ ಇದ್ದು, ಈ ಕೆರೆಯಲ್ಲಿ ಗಣನೀಯವಾಗಿ ಹೂಳು ತುಂಬಿಲ್ಲ. ಕೆರೆಗಳು ಹೂಳು ತುಂಬುವುದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಣ್ಣ ನೀರಾವರಿ ಇಲಾಖೆಗೆ ಒದಗಿಸಲಾಗುವ ಅನುದಾನದ ಲಭ್ಯತೆ ಮತ್ತು ಅವಶ್ಯಕತೆಯ ಅನುಗುಣವಾಗಿ ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮಾಧುಸ್ವಾಮಿ ಹೇಳಿದರು.
ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಗೆ ಸೇರಿದ 400 ಕೆರೆಗಳು, ಜಲಸಂಪನ್ಮೂಲ ಇಲಾಖೆಗೆ ಸೇರಿದ ಒಂದು ಕೆರೆ ಇದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ ಯಾವುದೆ ಕೆರೆಗಳಲ್ಲಿ ಹೂಳು ತುಂಬಿಕೊಂಡಿಲ್ಲ ಎಂದು ಅವರು ಹೇಳಿದರು.