ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರು ಸೇರಿ ಹಲವೆಡೆ ದೂರು ದಾಖಲು

Update: 2023-02-16 10:24 GMT

ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದೂರು ದಾಖಲು ಮಾಡಲಾಗಿದೆ.

'ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕೂಡಲೇ ಬಂಧಿಸಬೇಕು' ಎಂದು ಬೆಂಗಳೂರು, ಶಿವಮೊಗ್ಗ ಹಾಗೂ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಸಿದ್ದರಾಮಯ್ಯ ಬೆಂಬಲಿಗರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸಚಿವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅಶ್ವತ್ಥನಾರಾಯಣ ಅವರು ಸ್ಪಷ್ಟನೆ ನೀಡಿದ್ದು, ಮಂಡ್ಯದಲ್ಲಿ ಟಿಪ್ಪು-ಸಿದ್ದರಾಮಯ್ಯ ಹೋಲಿಸಿ ತಾನು ಮಾತಾಡಿದ್ದು, ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದು ತಿಳಿಸಿದರು.

ಸದನದಲ್ಲೂ  ಸ್ಪಷ್ಟನೆ ನೀಡಿದ ಸಚಿವರು

''ಸಿದ್ದರಾಮಯ್ಯ ಅವರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಟಿಪ್ಪು ಬಗ್ಗೆ ವೈಭವೀಕರಿಸಿರೋ ಬಗ್ಗೆ ಉಲ್ಲೇಖ ಮಾಡಿದ್ದೇನೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕು ಅಂತ ಹೇಳಿದ್ದೇನೆ.ಅವರ ಭಾವನೆಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸುತ್ತೇನೆ. ಅವರ ಬಗ್ಗೆ ವೈಯಕ್ತಿಕವಾಗಿ ಯಾವುದೇ ದ್ವೇಷ ಇಲ್ಲ'' 

- ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವರು

Similar News