ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರಕಾರ ಆದೇಶ

Update: 2023-02-20 12:34 GMT

ಬೆಂಗಳೂರು: ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ 2'ಎ'ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಇಲಾಖೆಯ ಅಧೀನನ ಕಾರ್ಯದರ್ಶಿ ಷಾಹಿನ್ ಪರ್ವೀನ್ ಆದೇಶದಲ್ಲಿ ತಿಳಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ''ರಾಜ್ಯದ ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬುದು ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಸಮುದಾಯದ ಕನಸನ್ನು ನನಸು ಮಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಅರ್ಪಿಸುತ್ತೇನೆ'' ಎಂದು ತಿಳಿಸಿದ್ದಾರೆ. 

Similar News