ಅಡ್ಯನಡ್ಕ ಪ್ರಕರಣದಲ್ಲಿ ದಬ್ಬಾಳಿಕೆ ನಡೆಸಿದವರ ವಿರುದ್ಧ ಕ್ರಮ ಆಗಿಲ್ಲ: ಸದನದಲ್ಲಿ ಯು.ಟಿ ಖಾದರ್

ಶೈಕ್ಷಣಿಕ ಕಾರ್ಯಾಗಾರಕ್ಕೆ ಸಂಘಪರಿವಾರದ ಕಾರ್ಯಕರ್ತರು ತಡೆಯೊಡ್ಡಿದ ಪ್ರಕರಣ

Update: 2023-02-20 13:36 GMT

ಬೆಂಗಳೂರು, ಫೆ. 20: ‘ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕ ಸಮೀಪ ಎಸೆಸೆಲ್ಸಿ, ಪಿಯು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಧಾರ್ಮಿಕ ಪ್ರವಚನ ಮಾಡಿದ್ದಾರೆ’ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರು ಅಡ್ಡಿಪಡಿಸಿದ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು.

ಸೋಮವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಪಕ್ಷ ಉಪ ನಾಯಕ ಯು.ಟಿ. ಖಾದರ್, ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಅಡ್ಯನಡ್ಕದ ಸಭಾಂಗಣವೊಂದರಲ್ಲಿ ಎಸೆಸೆಲ್ಸಿ, ಪಿಯು ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಕಾರ್ಯಾಗಾರ ನಡೆಸುತ್ತಿರುವ ವೇಳೆ ಅಲ್ಲಿಗೆ ಬಂದ ತಂಡವೊಂದು ಏಕಾಏಕಿ ಗಲಾಟೆ ಮಾಡಿದೆ.

ಆದರೆ, ಪೊಲೀಸರು ದಬ್ಬಾಳಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದೆ ಸಂಘಟಕರ ವಿರುದ್ಧವೇ ಕೇಸು ಹಾಕಿದ್ದಾರೆ. ಖಾಸಗಿ ವ್ಯಕ್ತಿಗಳಿಗೆ ಬೇರೆಯವರ ಉಸಾಬರಿ ಏಕೆ? ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಪೊಲೀಸರು ಉದ್ದೇಶಪೂರ್ವಕವಾಗಿ ದೂರು ನೀಡಿದವರ ಮೇಲೆ ಕ್ರಮ ಕೈಗೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

‘ಸ್ಥಳೀಯವಾಗಿ ಕೆಲವೊಂದು ಕಡೆ ಇಂತಹ ಘಟನೆಗಳು ನಡೆದಿರಬಹುದು. ಅವೆಲ್ಲವೂ ಸರಕಾರದ ನಿರ್ದೇಶದಂತೆ ಆಗುವುದಲ್ಲ’ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಇಂತಹ  ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಒತ್ತಾಯಿಸಿದರು.

Full View

Similar News