ತುರ್ತು ಚಿಕಿತ್ಸೆ ನೀಡಲು ವಿಫಲವಾದ ಖಾಸಗಿ ಆಸ್ಪತ್ರೆಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಡಾ.ಕೆ.ಸುಧಾಕರ್

Update: 2023-02-20 14:12 GMT

ಬೆಂಗಳೂರು, ಫೆ. 20: 171 ವಿವಿಧ ತುರ್ತು ಚಿಕಿತ್ಸೆ ಸಂದರ್ಭದಲ್ಲಿ ಯಾವುದೇ ಶಿಫಾರಸ್ಸು ಇಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ತುರ್ತು ಚಿಕಿತ್ಸೆ ನೀಡಲು ವಿಫಲವಾದ ಖಾಸಗಿ ಆಸ್ಪತ್ರೆಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. 

ಸೋಮವಾರ ವಿಧಾನ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶ್‍ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತುರ್ತು ಸಂದರ್ಭದಲ್ಲಿ ಹತ್ತಿರದ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ರೋಗಿ ಹೋದರೆ ಅವರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಬೇಕು. ಈ ಬಗ್ಗೆ ಸರಕಾರ ಸುತ್ತೋಲೆ ಹೊರಡಿಸಿದೆ ಎಂದರು.

ಯಾವುದೇ ಶಿಫಾರಸ್ಸಿಲ್ಲದೆ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಬೇಕು. ಒಂದು ವೇಳೆ ಮೀನಾಮೇಷ ಎಣಿಸಿ ರೋಗಿಯನ್ನು ದಾಖಲು ಮಾಡಿಕೊಳ್ಳಲು ವಿಫಲರಾದರೆ ಅಂತಹ ಖಾಸಗಿ ಆಸ್ಪತ್ರೆಗಳ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು. 

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಅನಗತ್ಯವಾಗಿ ಸರದಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಲು ಸ್ಕಿಪ್ ದ ಕ್ಯೂ ವಿನೂತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಇದರಿಂದಾಗಿ ವೈದ್ಯರ ಸಮಾಲೋಚನೆಗಾಗಿ ರೋಗಿಗಳು ಕಾಯುವ ಸಮಯದಲ್ಲಿ ಗಣನೀಯವಾಗಿ ತಗ್ಗಿದೆ ಎಂದು ಹೇಳಿದರು. 

ಬಿಪಿಎಲ್ ರೋಗಿಗಳಿಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಎಪಿಎಲ್ ಕಾರ್ಡುದಾರರಿಗೆ ಚಿಕಿತ್ಸಾ ವೆಚ್ಚದಲ್ಲಿ ಶೇ.30ರಷ್ಟು ರಿಯಾಯಿತಿ ಮಾಡಲಾಗುವುದು. ಅಲ್ಲದೆ, ಡಯಾಲಿಸಿಸ್ ರೋಗಿಗಳ ಸೇವೆಗಾಗಿ ಉಚಿತವಾಗಿ ಒದಗಿಸಲಾಗುತ್ತಿದೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ 2 ಹಾಸಿಗೆಗಳನ್ನು ಡಯಾಲಿಸಿಸ್ ಸೇವೆಗಳಿಗಾಗಿ ಕಾಯ್ದಿರಿಸಲಾಗಿದೆ ಎಂದರು.  

Similar News