SSLC, ಪಿಯುಸಿ ಮುಖ್ಯ ಪರೀಕ್ಷೆ; ಭದ್ರತಾ ಕ್ರಮಗಳ ಕುರಿತು ಸಭೆ ನಡೆಸಿದ ಸಚಿವ ಬಿ.ಸಿ.ನಾಗೇಶ್

ಪರೀಕ್ಷೆಯ ಅವಧಿಯಲ್ಲಿ ಜೆರಾಕ್ಸ್ ಕೇಂದ್ರಗಳು, ಟ್ಯೂಷನ್ ಕೇಂದ್ರಗಳ ಮೇಲೆ ವಿಶೇಷ ನಿಗಾ

Update: 2023-02-21 13:42 GMT

ಬೆಂಗಳೂರು, ಫೆ. 21: ಮಾರ್ಚ್ 9ರಿಂದ ಎಪ್ರಿಲ್ 15ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.  

ಮಂಗಳವಾರ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಗೃಹ ಸಚಿವರು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿದ ಸಚಿವರು ಈ ಕುರಿತು ಮಾಹಿತಿ ನೀಡಿದರು.

ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತದೆ. ಪರೀಕ್ಷೆಯ ಅವಧಿಯಲ್ಲಿ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಬಂದ್ ಮಾಡಲಾಗುತ್ತದೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಸೇರಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಮೊಬೈಲ್‍ ಫೋನ್, ಸ್ಮಾರ್ಟ್‍ವಾಚ್, ಇಯರ್ ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗುತ್ತದೆ. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸದಂತೆ ಹಾಗೂ ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಇನ್ನಿತರ ತಂಡಗಳು ವಿಶೇಷ ನಿಗಾ ಇರಿಸಲಿವೆ. ಈ ಸಂಬಂಧ ಪೊಲೀಸರು, ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಂಯೋಜನೆ, ಸಹಯೋಗದಿಂದ ಕಾರ್ಯ ನಿರ್ವಹಿಸಲಿವೆ ಎಂದು ಸಚಿವ ನಾಗೇಶ್ ಮಾಹಿತಿ ನೀಡಿದರು.

ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳು ಪೊಲೀಸ್ ಭದ್ರತೆ ಮತ್ತು ಸಿಸಿ ಕ್ಯಾಮೆರಾ ನಿಗಾದಲ್ಲಿರುತ್ತವೆ. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೆಸಿಕ್ ಮೊಬೈಲ್‍ ಫೋನ್ ಬಳಕೆಗೆ ಅನುಮತಿ ಇರುತ್ತದೆ ಎಂದು ಅವರು ತಿಳಿಸಿದರು. 

Similar News