ಒಂದು ವಾರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಸಚಿವ ಬಿ.ಸಿ.ನಾಗೇಶ್

Update: 2023-02-21 16:19 GMT

ಬೆಂಗಳೂರು, ಫೆ.21: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು ಎಂದು ತಿಳಿಸಿದರು.

ಈ ಕುರಿತು ಮುಖ್ಯ ಕಾರ್ಯದರ್ಶಿ, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

Similar News