ಮಾ.1ರಿಂದ ರಾಜ್ಯ ಸರಕಾರಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ
ಮಂಗಳೂರು, ಫೆ.23: ವೇತನ ಭತ್ತೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರಕಾರವನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಸರಕಾರಿ ನೌಕರರು ಮಾ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ.
ಸಂಘದ ದ.ಕ.ಜಿಲ್ಲಾ ಶಾಖೆಯ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ. ಜಿಲ್ಲಾಧ್ಯಕ್ಷ ಪಿ.ಕೆ.ಕೃಷ್ಣ ಅವರು ಫೆ.21ರಂದು ಬೆಂಗಳೂರಿನಲ್ಲಿ ನಡೆದ ಎಲ್ಲಾ ಜಿಲ್ಲೆಯ, ಎಲ್ಲ ತಾಲೂಕುಗಳ ಮತ್ತು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ, ಆಧ್ಯಕ್ಷರು -ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ದ.ಕ.ಜಿಲ್ಲೆಯಲ್ಲೂ ಸರಕಾರಿ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ದ.ಕ.ಜಿಲ್ಲೆಯಲ್ಲಿ ಸುಮಾರು 11 ಸಾವಿರ ನೌಕರರು ಇದ್ದಾರೆ. ಅವರೆಲ್ಲ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದರೆ ಅದಕ್ಕೆ ಸರಕಾರವೇ ಹೊಣೆ ಆಗಿರುತ್ತದೆ .ರಾಜ್ಯ ಸರಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಜು.1,2022ರಿಂದ ಜಾರಿಗೊಳಿಸಬೇಕಾಗಿತ್ತು ಆದರೆ ಸರಕಾರ ಆ ನಿಟ್ಟಿನಲ್ಲಿ ಗಮನ ಹರಿಸಿಲ್ಲ.
ರಾಜ್ಯ ಸರಕಾರಿ ನೌಕರರ ವೇತನ ಭತ್ತೆಗಳ ಪರಿಷ್ಕರಣೆಗಾಗಿ ಸರಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾರಾವ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರಕಾರಿ ನೌಕರರ ವೇತನ ಭತ್ತೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿತ್ತು. ಆದರೆ ರಾಜ್ಯದ 2023-24ನೇ ಸಾಲಿನ ಆಯವ್ಯಯದಲ್ಲಿ ಸರಕಾರಿ ನೌಕರರ ವೇತನ ಭತ್ತೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ.
ರಾಜ್ಯ ಸರಕಾರಿ ಅಧಿಕಾರಿ, ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ತೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ ಮತ್ತು ನ್ಯಾಯಸಮ್ಮತ ಹಕ್ಕಾಗಿದೆ. ಈಗಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವದು ಸರಕಾರದ ಜವಾಬ್ದಾರಿಯಾಗಿದೆ ಎಂದು ಅಧ್ಯಕ್ಷ ಪಿ.ಕೆ.ಕೃಷ್ಣ ಅಭಿಪ್ರಾಯಪಟ್ಟರು.
ಸಂಘದ ಪ್ರಮುಖ ಬೇಡಿಕೆಗಳು
*6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿ ಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ.4ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು 2022, ಜು.1ರಿಂದ ಜಾರಿಗೆ ಬರುವಂತೆ ಸರಕಾರಿ ಆದೇಶ ಹೊರಡಿಸಬೇಕು.
*ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರು ವುದರಿದ ಎನ್‌ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರುವುದು ಸರಕಾರದ ಜವಾಬ್ದಾರಿಯಾಗಿರುತ್ತದೆ. ರಾಜಸ್ಥಾನ, ಛತ್ತಿಸ್‌ಘಡ, ಜಾರ್ಖಂಡ್, ಹಿಮಾಚಲಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಅದೇ ರೀತಿಯಲ್ಲಿ ಕರ್ನಾಟಕದಲ್ಲೂ ಸಹ ರಾಜ್ಯ ಸರಕಾರ ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು.
ಸುದ್ದಿಗೋಷ್ಠಿಯಲ್ಲಿ ಸಂಘದ ದ.ಕ. ಜಿಲ್ಲಾ ಉಪಾಧ್ಯಕ್ಷ ಹರೀಶ್ ಕುಮಾರ್, ಕಾರ್ಯದರ್ಶಿ ಗಣೇಶ್ ರಾವ್ ಮತ್ತು ಖಜಾಂಚಿ ನವೀನ್ ಕುಮಾರ್ ಎಂ.ಎಸ್.ಉಪಸ್ಥಿತರಿದ್ದರು.