2006ಕ್ಕೂ ಮುನ್ನ ನೇಮಕಗೊಂಡ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ: ಸಿಎಂ ಬೊಮ್ಮಾಯಿ
ಬೆಂಗಳೂರು, ಫೆ.23: ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ 2006ಕ್ಕೂ ಮುನ್ನ ನೇಮಕಗೊಂಡು ಆ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರೆ ಅಂತಹ ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, 2006ಕ್ಕೂ ಮುನ್ನ ನೇಮಕವಾದವರಿಗೆ ಪಿಂಚಣಿ ವ್ಯವಸ್ಥೆಯಲ್ಲಿ ತಾರತಮ್ಯವಾಗಿದ್ದರೆ ಸರಿಪಡಿಸಲಾಗುತ್ತದೆ. 2006ರ ಎಪ್ರಿಲ್ 1ರಿಂದ ಆಯ್ಕೆಯಾದ ಎಲ್ಲ ಸರಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದರು.
ಸ್ವಾಯತ್ತ ಸಂಸ್ಥೆಗಳು, ನಿಗಮ ಮಂಡಳಿಗಳು, ಸಂಘಗಳು, ವಿಶ್ವವಿದ್ಯಾಲಯಗಳು, ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೂ ತಮ್ಮ ಸ್ವಂತ ಸಂಪನ್ಮೂಲದಿಂದ ಭರಿಸಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಖಾಸಗಿ ಅನುದಾನಿತ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶೇ. 14 ರಷ್ಟು ಉಪನ್ಯಾಸಕರು ಮತ್ತು ಅರೆಕಾಲಿಕ ಸಿಬ್ಬಂದಿಗಳು ಹಾಗೂ ಉದ್ಯೋಗಿಗಳು ಶೇ.10 ರಷ್ಟು ಪಿಂಚಣಿಯನ್ನು ಆಯಾ ಸಂಸ್ಥೆಗಳು ಕಡಿತ ಮಾಡಬೇಕು. ಇದನ್ನು ಕಡ್ಡಾಯವಾಗಿ ಮಾಡುವಂತೆ ಎಲ್ಲ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗುತ್ತದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.