ನಾನೇ ಸ್ವಯಂ ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ: ಬಿ.ಎಸ್.ಯಡಿಯೂರಪ್ಪ

ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ವೀರಶೈವ-ಲಿಂಗಾಯತರಿಗೆ ಬಿಎಸ್ ವೈ ಮನವಿ

Update: 2023-02-25 16:30 GMT

ಬೆಂಗಳೂರು, ಫೆ. 25: ‘ನನಗೆ ಇದೇ ತಿಂಗಳ 27ಕ್ಕೆ ಎಂಬತ್ತು ವರ್ಷ ತುಂಬುತ್ತದೆ. ಹೀಗಾಗಿ ನಾನೇ ಸ್ವಯಂ ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ಈ ಬಗ್ಗೆ ಲಿಂಗಾಯತ ವೀರಶೈವ ಬಂಧುಗಳು ಯಾವುದೇ ಕಾರಣಕ್ಕೂ ಅಪಾರ್ಥ ಮಾಡಿಕೊಳ್ಳಬಾರದು’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಶನಿವಾರ ನಗರದಲ್ಲಿನ ಕಾವೇರಿ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಇದುವರೆಗೂ ಎಲ್ಲ ರೀತಿಯ ಅವಕಾಶಗಳನ್ನು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊಟ್ಟಿದ್ದಾರೆ. ಹೀಗಾಗಿ ಎಲ್ಲ ರೀತಿಯ ಬೆಂಬಲವನ್ನು ನೀಡಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಬೇಕು ಎಂದು ಕೋರಿದರು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆಗಬೇಕೆಂಬುದು ನನ್ನ ಬಹಳ ವರ್ಷದ ಕನಸು. ಫೆ.27ಕ್ಕೆ ಪ್ರಧಾನಿ ಮೋದಿ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸುತ್ತಿದ್ದು, ನನ್ನ ಕನಸು ನನಸಾಗಿದೆ. ರಾಜ್ಯದ ಅಭಿವೃದ್ಧಿಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಮಾಡಿದ್ದೇನೆ ಎನ್ನುವ ತೃಪ್ತಿ ನನಗಿದೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ನಾನು ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ’ ಎಂದು ಯಡಿಯೂರಪ್ಪ ಗುಡುಗಿದರು.

‘ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಯಿತು’ ಎಂಬ ವಿಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನಾನೇ ಸ್ವಯಂ ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ಹೈಕಮಾಂಡ್ ನನಗೆ ಎಲ್ಲ ಸಹಕಾರ ನೀಡಿದೆ ಎಂದು ಅವರು ತಿಳಿಸಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ‘ರೀಡೂ’ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿ ಯಡಿಯೂರಪ್ಪ, ಆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ನೀಡಲಿದ್ದಾರೆ. ಹೀಗಾಗಿ ನಾನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

Similar News