ಜಿಪಂ, ತಾಪಂ ಚುನಾವಣೆಗೆ ಎಪ್ರಿಲ್ 1ರ ವೇಳೆಗೆ ಮೀಸಲಾತಿ ಪ್ರಕಟ: ಹೈಕೋರ್ಟ್ ಗೆ ಸರಕಾರದ ಹೇಳಿಕೆ

Update: 2023-03-02 13:14 GMT

ಬೆಂಗಳೂರು, ಮಾ.2: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಕುರಿತು ಎಪ್ರಿಲ್ 1ರ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸುವುದಾಗಿ ಹೈಕೋರ್ಟ್‍ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆ. 

ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್‍ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ'ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತು. 

ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರದ ಪರ ವಕೀಲರು ಹಾಜರಾಗಿ, ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಚ್ 1ರಂದು ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಜೊತೆಗೆ, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಎ.1ರವರೆಗೆ ಕಾಲಾವಕಾಶ ನೀಡಿದೆ. 

ಅಷ್ಟರ ಒಳಗಾಗಿ ಮೀಸಲಾತಿ ಪಟ್ಟಿ ಸಿದ್ಧಪಡಿಸಿ, ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಎಪ್ರಿಲ್ 11ಕ್ಕೆ ಮುಂದೂಡಿತು.

2023ರ ಮಾ.1ರಂದು ನಡೆದಿದ್ದ ವಿಚಾರಣೆ ವೇಳೆ ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾ.1ರಂದು ಅಧಿಸೂಚನೆ ಹೊರಡಿಸಿರುವುದಾಗಿ ಸರಕಾರ ಮಾಹಿತಿ ನೀಡಿತ್ತು. ನಂತರ ನ್ಯಾಯಪೀಠವು ವಿಚಾರಣೆಯನ್ನು ಮಾ.2ಕ್ಕೆ ಮುಂದೂಡಿತ್ತು.

Similar News