ಲಂಚ ಪ್ರಕರಣ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಯಡಿಯೂರಪ್ಪ

Update: 2023-03-04 13:28 GMT

ಬೆಂಗಳೂರು: ‘ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಶನಿವಾರ ನಗರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಲೋಕಾಯುಕ್ತ ದಾಳಿ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಣೆ ನೀಡಿದ್ದಾರೆ. ಪ್ರಕರಣದಲ್ಲಿ ಯಾರೂ ಮಧ್ಯಪ್ರವೇಶ ಮಾಡಲು ಅವಕಾಶವಿಲ್ಲ. ಕಾನೂನು ರೀತಿಯಲ್ಲಿ ಕ್ರಮ ಆಗಲಿದೆ ಎಂದು ಸ್ವತಃ ಮುಖ್ಯಮಂತ್ರಿ ಸ್ಪಷ್ಟಪಡಿಸಿದ ಬಳಿಕ ನಾನು ಮಾತನಾಡುವುದು ಸಲ್ಲ ಎಂದರು.

ಈ ಪ್ರಕರಣ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ. ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುವ ನೈತಿಕತೆ ಕಾಂಗ್ರೆಸ್ ಮುಖಂಡರಿಗೆ ಇಲ್ಲ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು.

Similar News