ಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾ.9ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಡಿಕೆಶಿ

Update: 2023-03-05 15:45 GMT

ಬೆಂಗಳೂರು, ಮಾ. 5: ಆಡಳಿತಾರೂಢ ಬಿಜೆಪಿ ಸರಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಮಾ.9ರಂದು ‘ಕರ್ನಾಟಕ ಬಂದ್’ಗೆ ಪ್ರತಿಪಕ್ಷ ಕಾಂಗ್ರೆಸ್ ಕರೆ ನೀಡಿದ್ದು, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚದ ಪ್ರಕರಣದ ಹಿನ್ನೆಲೆಯಲ್ಲಿ ‘ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದೆ.

ರವಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಕಟಣೆ ನೀಡಿದ್ದು, ‘ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. ಶೇ.40ರಷ್ಟು ಕಮಿಷನ್ ಸರಕಾರ ಎಲ್ಲ ವರ್ಗದ ಜನರ ಬದುಕು ನಾಶ ಮಾಡಿದೆ. ಭ್ರಷ್ಟಾಸುರ ಬೊಮ್ಮಾಯಿ ಸರಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ, ಭ್ರಷ್ಟಾಚಾರಕ್ಕೋಸ್ಕರದ ಸರಕಾರವಾಗಿದೆ’ ಎಂದು ಟೀಕಿಸಿದ್ದಾರೆ.

ಬಿಜೆಪಿ ಸರಕಾರದ ಸಾಧನೆಗಳೆಂದರೆ ಪ್ರತಿಯೊಂದು ಗುತ್ತಿಗೆಯಲ್ಲೂ ಶೇ.40ರಷ್ಟು ಕಮಿಷನ್, ಶಾಲಾ ಅನುದಾನದಲ್ಲಿ ಶೇ.40ರಷ್ಟು ಕಮಿಷನ್, ಧಾರ್ಮಿಕ ಮಠಗಳ ಅನುದಾನದಲ್ಲಿ ಶೇ.30ರಷ್ಟು ಕಮಿಷನ್, ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆ ಟೆಂಡರ್ ಲಂಚ, ವರ್ಗಾವಣೆ ಮತ್ತು ಪೆÇೀಸ್ಟಿಂಗ್‍ಗೆ ಲಂಚ, ಪಿಎಸ್ಸೈ, ಪ್ರಾಧ್ಯಾಪಕ, ಪೌರ ಕಾರ್ಮಿಕರು ಸೇರಿದಂತೆ ಎಲ್ಲ ನೇಮಕಾತಿಯಲ್ಲಿ ಅಕ್ರಮಗಳು ಮಿತಿ ಮೀರಿವೆ ಎಂದು ಅವರು ದೂರಿದ್ದಾರೆ.

ಬಿಜೆಪಿ ಹಾಗೂ ಬೊಮ್ಮಾಯಿ ಸರಕಾರದ ಭ್ರಷ್ಟಾಚಾರಕ್ಕೆ ಕೆಎಸ್‍ಡಿಎಲ್ ಅಕ್ರಮ ಸಾಕ್ಷಿಯಾಗಿದೆ. ಬಿಜೆಪಿ ಸರಕಾರದ ವಿರುದ್ಧ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಮಾ.9ರ ಬೆಳಗ್ಗೆ 9ಗಂಟೆಯಿಂದ 11ಗಂಟೆಯ ವರೆಗೆ ‘ಸಾಂಕೇತಿಕ ಬಂದ್’ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬಸವರಾಜ ಬೊಮ್ಮಾಯಿ ಸರಕಾರದ  ಭ್ರಷ್ಟಾಚಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಿಗರು ಈ ಭ್ರಷ್ಟ ಸರಕಾರವನ್ನು ಕಿತ್ತೊಗೆಯಲು ಪಣ ತೊಟ್ಟಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ  ತಿಳಿಸಿದ್ದಾರೆ.

Similar News