×
Ad

ಉಡುಪಿಯಲ್ಲಿ ಕೇಂದ್ರೀಯ ವಿದ್ಯಾಲಯ ಸಂಕೀರ್ಣ ನಿರ್ಮಾಣಕ್ಕೆ 26 ಕೋಟಿ ರೂ. ಮಂಜೂರು: ಶೋಭಾ ಕರಂದ್ಲಾಜೆ

Update: 2023-03-06 19:12 IST

ಉಡುಪಿ, ಮಾ.6: ಉಡುಪಿಯಲ್ಲಿ  ಕೇಂದ್ರೀಯ ವಿದ್ಯಾಲಯ ಮತ್ತು ಒಂಭತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ 26 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರಸ್ತುತ ಅಲೆವೂರು ಪ್ರಗತಿ ನಗರದ ಬಾಡಿಗೆ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ಕಾರ್ಯ ನಿರ್ವಹಿಸುತ್ತಿದೆ. ಸುಮಾರು ಒಂದು ದಶಕದಿಂದ ಉಡುಪಿಯಲ್ಲಿರುವ ಕೇಂದ್ರೀಯ ವಿದ್ಯಾಲಯ ಮತ್ತು ಅದರ ಸಿಬ್ಬಂದಿಗಳಿಗೆ ವಸತಿ ಕಟ್ಟಡಗಳ ಅಗತ್ಯತೆ ಬಗ್ಗೆ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್‌ರಲ್ಲಿ ಮನವಿ ಮಾಡಲಾಗಿತ್ತು.

ಮನವಿಗೆ ಸ್ಪಂದಿಸಿದ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆ ಇದೀಗ ಸುಮಾರು 26.00 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ.

ಒಂದರಿಂದ ಹತ್ತನೆಯ ತರಗತಿಗಳಿಗೆ ತಲಾ ಎರಡು ವಿಭಾಗಗಳುಳ್ಳ ತರಗತಿ ಕೊಠಡಿಗಳು ಮತ್ತು ಒಂಭತ್ತು ಸಿಬ್ಬಂದಿ ವಸತಿಗಳ ಕಟ್ಟಡದ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಅನುಮೋದನೆಯಾಗಿದ್ದು, ಅತೀ ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭವಾಗಲಿದೆಯೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಉಡುಪಿ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಹೆತ್ತವರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್‌ರಿಗೆ ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿನಂದನೆ ತಿಳಿಸಿದ್ದಾರೆ.

Similar News