ಟೆಂಡರ್ ಗಾಗಿ ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು
48 ಗಂಟೆಗಳಲ್ಲಿ ಶರಣಾಗತಿಗೆ ಸೂಚನೆ
ಬೆಂಗಳೂರು, ಮಾ.7: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‍ಡಿಎಲ್)ನಿಯಮಿತಕ್ಕೆ ಕಚ್ಚಾ ಸಾಮಗ್ರಿ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಶಾಸಕ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ವಿಚಾರಣೆ ನಡೆಸಿದರು. ಅರ್ಜಿದಾರ ಮಾಡಾಳ್ ವಿರೂಪಾಕ್ಷಪ್ಪ ಅವರು 5 ಲಕ್ಷ ರೂ.ಮೊತ್ತದ ಬಾಂಡ್ ಸಲ್ಲಿಸಬೇಕು. ಆದೇಶವಾದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ಈ ವೇಳೆ ತನಿಖಾಧಿಕಾರಿಯು ಆರೋಪಿಯನ್ನು ಬಂಧಿಸಬಾರದು ಎಂದು ನ್ಯಾಯಪೀಠವು ಆದೇಶ ನೀಡಿದೆ.
ಅಲ್ಲದೆ, ಮಾಡಾಳ್ ವಿರೂಪಾಕ್ಷಪ್ಪ ಅವರು, ಇಬ್ಬರು ಭದ್ರತೆ ಕೊಡಬೇಕು. ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಾರದು. ತನಿಖೆಗೆ ಸಹಕರಿಸಬೇಕು. ಪ್ರತಿವಾದಿ ಲೋಕಾಯುಕ್ತ ಪೊಲೀಸರು ಆಕ್ಷೇಪಣೆ ಸಲ್ಲಿಸಬೇಕು ಎಂದಿರುವ ನ್ಯಾಯಪೀಠವು ಅರ್ಜಿದಾರ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿಕೆ ಮಾಡಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ಎಫ್‍ಐಆರ್ ನಲ್ಲಿ ಅರ್ಜಿದಾರರ ವಿರುದ್ಧ ಆರೋಪ ಸಾಬೀತುಪಡಿಸಲು ಯಾವುದೇ ಸಾಕ್ಷಿಗಳಿಲ್ಲ. ಟೆಂಡರ್‍ಗೆ ಲಂಚ ನೀಡುವಂತೆ ಕಮಿಷನ್ ಬೇಡಿಕೆ ಇಟ್ಟಿರುವ ಬಗ್ಗೆ, ಪ್ರಯತ್ನ ಮಾಡಿರುವ ಬಗ್ಗೆ ಅಥವಾ ನಿರ್ದಿಷ್ಟ ದಿನದಂದು ಲಂಚ ಕೊಡುವಂತೆ ಕೇಳಿದ ಬಗ್ಗೆ ಯಾವುದೇ ಸಾಕ್ಷಿ ಇಲ್ಲ. ಮಗ ಮತ್ತು ತಂದೆಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ. ವಿರೂಪಾಕ್ಷಪ್ಪ ಅವರಿಗೀಗ 75 ವರ್ಷ. ನಾಲ್ಕು ಬಾರಿ ಶಾಸಕರು. ಜತೆಗೆ ಹೃದಯ ಸಂಬಂಧಿತ ಸಮಸ್ಯೆ ಹೊಂದಿದ್ದಾರೆ. ವಿಚಾರಣೆಗೆ ಹಾಜರಾದರೆ ಲೋಕಾಯುಕ್ತ ಪೊಲೀಸರು ಬಂಧಿಸುವ ಭೀತಿ ಇದೆ. ಹೀಗಾಗಿ, ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪ್ರತಿಯಾಗಿ ಲೋಕಾಯುಕ್ತ ಪರ ಹಾಜರಾಗಬೇಕಿದ್ದ ವಕೀಲ ಬಿ.ಬಿ.ಪಾಟೀಲ ಅವರು ಗೈರಾಗಿದ್ದರು. ಅವರ ಕಚೇರಿಯ ಕಿರಿಯ ವಕೀಲ ಪ್ರತಿವಾದ ಮಂಡಿಸಿ. ಈ ಪ್ರಕರಣದಲ್ಲಿ ತನಿಖಾಧಿಕಾರಿಯಿಂದ ಹೆಚ್ಚಿನ ವಿವರಣೆ ಪಡೆಯಬೇಕಿದೆ ಎಂದು ಪೀಠಕ್ಕೆ ತಿಳಿಸಿದರು.
ಏನಿದು ಅರ್ಜಿ?: ನನ್ನ ವಿರುದ್ಧ ಕಾನೂನು ಬಾಹಿರವಾಗಿ ಮತ್ತು ಕಿರುಕುಳ ಕೊಡುವ ದುರುದ್ದೇಶದಿಂದ ಎಫ್‍ಐಆರ್ ದಾಖಲು ಮಾಡಲಾಗಿದೆ. ನಾನು ಲಂಚವನ್ನು ಕೇಳಿಯೂ ಇಲ್ಲ ಮತ್ತು ಪಡೆದೂ ಇಲ್ಲ. ಪ್ರಕರಣದಲ್ಲಿ ನನ್ನನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ವಿಚಾರಣೆ ವೇಳೆ ಪೊಲೀಸರು ನನ್ನನ್ನು ಬಂಧಿಸುವ ಭೀತಿ ಇದೆ. ಹೀಗಾಗಿ, ನನಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ವಿರೂಪಾಕ್ಷಪ್ಪ ಮಾಡಾಳ್ ಅವರು ಅರ್ಜಿಯಲ್ಲಿ ಕೋರಿದ್ದಾರೆ.
ಪ್ರಕರಣವೇನು?: ‘ವಿರೂಪಾಕ್ಷಪ್ಪ ಅವರ ಪುತ್ರರೂ ಆದ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಟೆಂಡರ್ ಪ್ರಕ್ರಿಯೆಯಲ್ಲಿ 40 ಲಕ್ಷ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು ಮಾ.2ರಂದು ಎಫ್‍ಐಆರ್ ದಾಖಲಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 7 (ಎ) ಮತ್ತು (ಬಿ), 7 ಎ, 8, 9 ಮತ್ತು 10ರ ಅಡಿಯಲ್ಲಿ ದಾಖಲಿಸಿರುವ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲ ಆರೋಪಿಯಾದರೆ, ಪ್ರಶಾಂತ್ ಮಾಡಾಳ್ ಎರಡನೆ ಆರೋಪಿಯಾಗಿದ್ದಾರೆ.