ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ: ನಳಿನ್ ಕುಮಾರ್ ಕಟೀಲ್

Update: 2023-03-07 12:51 GMT

ಬೆಂಗಳೂರು, ಮಾ. 7: ‘ನಮ್ಮ ಪಕ್ಷ ಯಾವುದೇ ಸಂದರ್ಭದಲ್ಲಿಯೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ ಸಂಬಂಧ ಲೋಕಾಯುಕ್ತ ವರದಿ ಪಡೆದು ಹೈಕಮಾಂಡ್‍ಗೆ ಸಲ್ಲಿಸಲಿದ್ದು, ವರಿಷ್ಠರು ಈ ಬಗ್ಗೆ ಮುಂದಿನ ತೀರ್ಮಾನ ಮಾಡಲಿದ್ದಾರೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮ್ಮ ಸರಕಾರ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದೆ. ಈ ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿದ್ದರು. ಭ್ರಷ್ಟಾಚಾರ ನಿಗ್ರಹಿಸುವ ಉದ್ದೇಶದಿಂದಲೇ ಲೋಕಾಯುಕ್ತಕ್ಕೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರು ತಿಹಾರ್ ಜೈಲಿಗೆ ಹೋಗಿ ಬಂದವರು. ಅವರನ್ನು ಏಕೆ ಪಕ್ಷದಿಂದ ಉಚ್ಚಾಟನೆ ಮಾಡಿಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‍ನವರಿಗೆ ಇಲ್ಲ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆಂದು ಕಟೀಲ್ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕೆಲ ಹಾಲಿ ಸಚಿವರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ಬಿಎಸ್‍ವೈ ಹೇಳಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ, ಪಕ್ಷದಲ್ಲಿ ಟಿಕೆಟ್ ಅಂತಿಮಗೊಳಿಸುವುದು ಸಂಸದೀಯ ಮಂಡಳಿ. ಬಿಎಸ್‍ವೈ ಅವರ ಮಂಡಳಿಯ ಸದಸ್ಯರು ಆಗಿದ್ದು, ಹೇಳಿಕೆ ನೀಡಿದ್ದಾರೆ ಎಂದ ಅವರು, ಕಾಂಗ್ರೆಸ್ ಅನ್ನು ಮುಂದಿನ ಚುನಾವಣೆಯಲ್ಲಿ ಜನ ಎಲ್ಲಿ ಇಡಲಿದ್ದಾರೆಂಬುದು ಗೊತ್ತಾಗಲಿದೆ ಎಂದು ತಿರುಗೇಟು ನೀಡಿದರು.

Similar News