ವಿಧಾನಸಭೆ ಚುನಾವಣೆ ಪೂರ್ವ ತಯಾರಿ | ಇಂದು ರಾಜ್ಯಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ಭೇಟಿ

Update: 2023-03-09 04:50 GMT

ಬೆಂಗಳೂರು, ಮಾ.8: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ತಂಡ ಮಾ.9, 10 ಮತ್ತು 11ರಂದು ಮೂರು ದಿನಗಳ ಕಾಲ ಬೆಂಗಳೂರಿಗೆ ಭೇಟಿ ನೀಡಲಿದೆ.

ನಿಯೋಗದಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಆಗಮಿಸಲಿದ್ದಾರೆ.

ನಿಯೋಗವು ಮೊದಲು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಲಿದ್ದು, ತದನಂತರ ಮುಂಬರುವ ಚುನಾವಣೆ ಕುರಿತು ಪ್ರತ್ಯೇಕವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಿ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯಲಿದೆ. 

ಮಾ.9ರ ಸಂಜೆ ಹೋಟೆಲ್ ತಾಜ್ ವೆಸ್ಟೆಂಡ್‍ನಲ್ಲಿ ಹಮ್ಮಿಕೊಳ್ಳಲಾಗಿರುವ ‘ಪ್ರಜಾಪ್ರಭುತ್ವದ ಒಳಗೊಳ್ಳುವಿಕೆ ಮತ್ತು ಸಮಗ್ರತೆ’ ವಿಷಯದ ಕುರಿತ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಲವು ಪ್ರಜಾಪ್ರಭುತ್ವ ದೇಶಗಳ ಚುನಾವಣಾ ಆಯುಕ್ತರುಗಳು ಇದರಲ್ಲಿ ನೇರವಾಗಿ ಪಾಲ್ಗೊಳ್ಳಲಿದ್ದು ಕೆಲವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ.

ಮಾ.10ಕ್ಕೆ ರಾಜ್ಯದ 34 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸಲಿದೆ. ನಂತರ ನಗರದ ಐಐಎಸ್‍ಸಿ ಆವರದಲ್ಲಿರುವ ಟಾಟಾ ಸಭಾಂಗಣದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬಿಬಿಎಂಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮತದಾರರ ಜಾಗೃತಿ ಕುರಿತ ವಿಶೇಷ ವಸ್ತುಪ್ರದರ್ಶನ ಉದ್ಘಾಟಿಸಲಿದೆ. ಆನಂತರ ಮತದಾರರ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂವಾದದಲ್ಲಿ ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ದಿವ್ಯಾಂಗರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಮಾ.11ರ ಬೆಳಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಪರಾಹ್ನದ ನಂತರ ಮೂರು ದಿನಗಳ ಕರ್ನಾಟಕ ಭೇಟಿಯ ಕುರಿತು ಪತ್ರಿಕಾಗೋಷ್ಠಿ ನಡೆಸಿಕೊಡಲಿದ್ದಾರೆ. ಅಂದು ಸಂಜೆ ವೇಳೆಗೆ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಆಯೋಗದ ಪ್ರಕಟನೆ ತಿಳಿಸಿದೆ.

Similar News