ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ
ಅಗರ್ತಲಾ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಎರಡನೇ ಬಾರಿಗೆ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಸಹಾ ಅವರೊಂದಿಗೆ ಎಂಟು ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಅಗರ್ತಲಾದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಭಾಗವಹಿಸಿದ್ದರು. ಅವರ ಜೊತೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಈಶಾನ್ಯ ರಾಜ್ಯದ ಯಶಸ್ಸಿನ ಶಿಲ್ಪಿ ಹಿಮಂತ ಬಿಸ್ವಾ ಶರ್ಮಾ ಕೂಡ ಇದ್ದರು.
ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡ, ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹಾಗೂ ಸಿಕ್ಕಿಂ ಮುಖ್ಯಮಂತ್ರಿ ಪಿ.ಎಸ್. ತಮಾಂಗ್ ಕೂಡ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಬಿಜೆಪಿಯ ಬಿಪ್ಲಬ್ ದೇಬ್ ಕೂಡ ಇದ್ದರು, ಕಳೆದ ಅವಧಿಯ ಮಧ್ಯಭಾಗದಲ್ಲಿ ದೇಬ್ ಬದಲಿಗೆ ಸಹಾ ಅವರನ್ನು ಸಿಎಂ ಹುದ್ದೆಗೇರಿಸಲಾಗಿತ್ತು.
ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ಪ್ರತಿಪಕ್ಷ ಸಿಪಿಎಂ ಮತ್ತು ಕಾಂಗ್ರೆಸ್ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ.