×
Ad

ಎಚ್‍ಡಿಕೆ ಕುಟುಂಬದಿಂದ ಸರಕಾರಿ ಭೂಮಿ ಕಬಳಿಕೆ ಆರೋಪ: ಸಿಎಸ್ ಖುದ್ದು ಹಾಜರಿಗೆ ಹೈಕೋರ್ಟ್ ಸೂಚನೆ

Update: 2023-03-09 22:47 IST

ಬೆಂಗಳೂರು, ಮಾ.9: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತವರ ಸಂಬಂಧಿಕರಾದ ಮದ್ದೂರು ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರ ವಿರುದ್ಧದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಆರೋಪ ಪ್ರಕರಣ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಿದೆ.

ಪ್ರಕರಣ ಸಂಬಂಧ ಕಂದಾಯ ಇಲಾಖೆ ಕಾರ್ಯದರ್ಶಿ ಸಲ್ಲಿಸಿದ ಪ್ರಮಾಣಪತ್ರ ಪರಿಶೀಲಿಸಿದ ನ್ಯಾಯಪೀಠ, ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಗೆ ಲೋಕಾಯುಕ್ತ 2014ರಲ್ಲಿ ಆದೇಶ ನೀಡಿದೆ. ಆದರೆ, ಸರಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಆದ್ದರಿಂದ ಮುಂದಿನ ವಿಚಾರಣೆಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಾಗಬೇಕು ಸೂಚನೆ ನೀಡಿದೆ.

Similar News