ಜಯನಗರದಲ್ಲಿ 9,153 ಮಂದಿ ಹೊರಭಾಗದ ಮತದಾರರು: ಬಿಜೆಪಿ ದೂರು

Update: 2023-03-13 18:33 GMT

ಬೆಂಗಳೂರು, ಮಾ.13: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಇಲ್ಲಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಹೊರ ರಾಜ್ಯಗಳ ಜನರನ್ನು ಮತದಾರರಾಗಿ ಪರಿವರ್ತಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಈ ಕುರಿತು ದಾಖಲೆಗಳ ಸಮೇತ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ ಅವರು, ಕೇವಲ 9 ತಿಂಗಳ ಅವಧಿಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೇವಲ 3 ವಾರ್ಡ್ ಗಳ ವ್ಯಾಪ್ತಿಯಲ್ಲಿ 9,153 ಮಂದಿಗೂ ಹೆಚ್ಚು ಮಂದಿ ಮತದಾರರನ್ನು ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.

ಬಿಬಿಎಂಪಿಯ ಜಯನಗರ ವಿಧಾನಸಭಾ ಕ್ಷೇತ್ರದ ಗುರಪ್ಪನಪಾಳ್ಯ ವಾರ್ಡ್, ಜಯನಗರ ಪೂರ್ವ ವಾರ್ಡ್ ಮತ್ತು ಭೈರಸಂದ್ರ ವಾರ್ಡ್‍ಗಳ ವ್ಯಾಪ್ತಿಯಲ್ಲಿ 9 ತಿಂಗಳ ಅವಧಿಯಲ್ಲಿ ಒಟ್ಟು 9,153 ಮತದಾರರನ್ನು ಅಲ್ಲಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಆದರೆ, ಈ ಪೈಕಿ ಶೇ. 50ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ ಸಂಬಂಧವಿಲ್ಲದವರಾಗಿದ್ದು, ಹೊರ ಜಿಲ್ಲೆಗಳ ಮತ್ತು ಹೊರ ರಾಜ್ಯಗಳ ಮತದಾರರನ್ನು ಜಯನಗರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ದಾಖಲೆಗಳಿಂದ ಬಹಿರಂಗವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ಹೊರ ಜಿಲ್ಲೆಗಳು ಮತ್ತು ತಮಿಳುನಾಡಿನ ಧರ್ಮಪುರಿ, ಕೃಷ್ಣಗಿರಿ, ಹೊಸೂರು ಭಾಗಗಳಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಮತದಾರರನ್ನು ಕೇವಲ ಪ್ರಸ್ತುತ ಸಾಲಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ದುರುದೇಶಪೂರ್ವಕವಾಗಿ ಸೇರ್ಪಡೆಗೊಳಿಸಲಾಗಿದೆ ಎಂದ ಅವರು, ಮತದಾರರ ಪಟ್ಟಿಯಲ್ಲಿರುವ ಎಲ್ಲ್ಲ 9,153 ಮತದಾರರ ಪರಿಶೀಲನೆ ಕಾರ್ಯವನ್ನು ಸ್ಥಳೀಯ ಅಧಿಕಾರಿಗಳನ್ನು ಹೊರತುಪಡಿಸಿ ಪ್ರಾಮಾಣಿಕ ಅಧಿಕಾರಿಗಳಿಂದ ನಡೆಸಿ, ಸ್ಥಳೀಯರಲ್ಲದ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

Similar News