ಬೆಂಗಳೂರು ಸೇರಿ ರಾಜ್ಯದ ಹಲವೆಡೆ ತುಂತುರು ಮಳೆ

Update: 2023-03-16 18:32 GMT

ಬೆಂಗಳೂರು, ಮಾ.16: ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುರುವಾರ ತುಂತುರು ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರು ವರುಣನ ಸಿಂಚನದಿಂದ ಪುಳಕಿತರಾಗಿದ್ದಾರೆ. 

ಬೇಸಿಗೆ ತೀವ್ರವಾಗುತ್ತಿರುವುದರ ಜತೆ ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಬೆಂಗಳೂರು, ಮಲೆನಾಡು ಸೇರಿ ಹಲವೆಡೆ ತುಂತುರು ಮಳೆಯಾದ ಪರಿಣಾಮ ಇಳೆ ಕೊಂಚ ತಣ್ಣಗಾಯಿತು. ಅಲ್ಲದೇ, ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಉತ್ತರ ಕರ್ನಾಟಕ ಹಾಗೂ ಕರಾವಳಿಯ ಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿಲೋ ಮೀಟರ್ ಎತ್ತರವರೆಗೆ ಸುಳಿಗಾಳಿ ನಿರ್ಮಾಣವಾಗಿದೆ. ಎಲ್ಲೆಡೆ ಹೆಚ್ಚಾಗಿದ್ದ ತಾಪಮಾನ ತುಸು ಕಡಿಮೆಯಾಗಿದೆ. ಕರಾವಳಿ ಭಾಗದಲ್ಲಿ ಬಿಸಿ ವಾತಾವರಣದ ನಡುವೆ ಮೋಡಮುಸುಕಿದ ವಾತಾವರಣ ಇದೆ. ಕರ್ನಾಟಕದ ಬಹುತೇಕ ಕಡೆ ಬಿಸಿಲಿನ ಧಗೆ ಹೆಚ್ಚುತ್ತಿರುವ ಮಧ್ಯೆಯು ಗುಡುಗ ಸಹಿತ ಮಳೆ ಸುರಿಯಲಿದೆ. 

ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಆಗುಂಬೆ ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆ ಬಿದ್ದಿದೆ. ಮಾ.19ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Similar News