ರಾಹುಲ್ ಗಾಂಧಿ ಇಂದು ಬೆಳಗಾವಿಗೆ ಆಗಮನ: ‘ಯುವ ಕ್ರಾಂತಿ ಸಮಾವೇಶ'ದಲ್ಲಿ ಭಾಗಿ

Update: 2023-03-20 02:08 GMT

ಬೆಂಗಳೂರು, ಮಾ. 20: ಬೆಳಗಾವಿ ನಗರದ ಹಿಂಡಲಗ ರಸ್ತೆಯಲ್ಲಿರುವ ಸಿಪಿಇಡಿ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ವತಿಯಿಂದ ಆಯೋಜಿಸಿರುವ ‘ಯುವ ಕ್ರಾಂತಿ ಸಮಾವೇಶ’ದಲ್ಲಿ ಪಾಲ್ಗೊಳ್ಳುವ ನಿಮಿತ್ತ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಇಂದು (ಮಾ.20) ರಾಜ್ಯಕ್ಕೆ ಆಗಮಿಸಲಿದ್ದಾರೆ.

ಮೇಲ್ಕಂಡ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಎಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಹೆಚ್ಚು 18 ಕ್ಷೇತ್ರಗಳನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಯುವ ಕ್ರಾಂತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿವ ನಿಟ್ಟಿನಲ್ಲಿ ರಣತಂತ್ರ ರೂಪಿಸಲಾಗುತ್ತಿದೆ.

ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ‘ಹೀಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಗಿದ್ದು, ಮಾ.22ರೊಳಗೆ ಪಟ್ಟಿ ಪ್ರಕಟಿಸಲಾಗುವುದು. ಕಾಂಗ್ರೆಸ್ ಪರಿಶೀಲನಾ ಸಮಿತಿ ಈಗಾಗಲೇ ಸಭೆ ನಡೆಸಿ ಹೆಸರುಗಳನ್ನು ಶಿಫಾರಸು ಮಾಡಿದೆ. ಕೇಂದ್ರ ಚುನಾವಣಾ ಸಮಿತಿಯು ಶಿಫಾರಸು ಮಾಡಿದ ಹೆಸರುಗಳ ಬಗ್ಗೆ ಚರ್ಚೆ ನಡೆಸಿದೆ’ ಎಂದು ತಿಳಿಸಿದರು.

‘125 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‍ನ ಬಹುತೇಕ ಹಾಲಿ ಶಾಸಕರು ಟಿಕೆಟ್ ಪಡೆಯಲಿದ್ದಾರೆ. ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷವು ಮುಂಬರಲಿರುವ ವಿಧಾನಸಭಾ 140 ಸ್ಥಾನಗಳಲ್ಲಿ ಗೆಲುವುದು ಸಾಧಿಸಲಿದೆ ಎಂದು ತಿಳಿಸಿವೆ’ ಎಂದು ಸಲೀಂ ಅಹ್ಮದ್ ನುಡಿದರು.

Similar News