ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಮುಂದಿನ 3 ವಾರಗಳ ಕಾಲ ಮುಷ್ಕರ ನಡೆಸದಂತೆ ಸೂಚನೆ

Update: 2023-03-23 12:43 GMT

ಬೆಂಗಳೂರು, ಮಾ.23: ಸರಕಾರ ಸಾರಿಗೆ ನೌಕರರ ಮೂಲ ವೇತನದಲ್ಲಿ ಶೇ.15ರಷ್ಟು ವೇತನ ಹೆಚ್ಚಳ ಮಾಡಿ ಆದೇಶಿಸಿದ್ದರೂ ಒಪ್ಪದ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ನಾಳೆ (ಮಾ.24) ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ. 

ರಾಜ್ಯಾದ್ಯಂತ ಎಸೆಸೆಲ್ಸಿ ಹಾಗೂ ಪಿಯುಸಿ ಸೇರಿದಂತೆ ಇತರೆ ಪರೀಕ್ಷೆಗಳು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಿದರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯುಂಟಾಗಲಿದೆ. ಈ ನಿಟ್ಟಿನಲ್ಲಿ ಮುಷ್ಕರ ನಡೆಸುವುದು ಸರಿಯಾದ ಕ್ರಮ ಅಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಸಾರಿಗೆ ನೌಕರರು ಕರೆದಿದ್ದ ಮುಷ್ಕರವನ್ನು ಪ್ರಶ್ನಿಸಿ ಶಿವಮೊಗ್ಗ ಜಿಲ್ಲೆಯ ಹರೊಗೊಲಿಗೆ ಗ್ರಾಮದ ಎಚ್.ಎಂ.ವೆಂಕಟೇಶ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಅಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠ, ವಿದ್ಯಾರ್ಥಿಗಳ ಪರೀಕ್ಷಾ ಹಿತದೃಷ್ಟಿಯಿಂದ ಮುಂದಿನ ಮೂರು ವಾರಗಳ ಕಾಲ ಮುಷ್ಕರ ನಡೆಸದಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದೇ ವೇಳೆ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಮಾನ ವೇದಿಕೆಗೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾನೂನು ಪ್ರಕಾರ ನಡೆಯುವ ಮುಷ್ಕರಕ್ಕೆ ಅಡ್ಡಿಪಡಿಸುವುದಿಲ್ಲ. ಆದರೆ, ಪ್ರಸಕ್ತ ಸನ್ನಿವೇಶದಲ್ಲಿ ಕರೆದಿರುವ ಮುಷ್ಕರದಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿವಿಧ ತರಗತಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಬಸ್ ಮುಷ್ಕರ ನಡೆದರೆ ಮಕ್ಕಳು ಶಾಲೆಗೆ ತಲುಪಲು ಸಾಧ್ಯವಾಗುವುದಿಲ್ಲ. ಇದರಿಂದ ಸಮಯಕ್ಕೆ ಸರಿಯಾಗಿ ಪರೀಕ್ಷೆಗಳಿಗೆ ಹಾಜರಾಗುವ ಅವಕಾಶವನ್ನು ತಪ್ಪಿಸಿಕೊಳ್ಳುವಂತಾಗಲಿದೆ. ಅವರ ಶೈಕ್ಷಣಿಕ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದಾರೆ.

ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಂಧಾನ ಸಭೆ ನಡೆಸಲಾಗಿದ್ದು, ಇದೀಗ ಮತ್ತೊಂದು ಸಂಧಾನ ಸಭೆಯನ್ನು ಏಪ್ರಿಲ್ 6 ರಂದು ಕರೆಯಲಾಗಿದೆ. ಈ ಸಭೆಯವರೆಗೂ ಮುಷ್ಕರ ನಡೆಸದಂತೆ ಸರಕಾರದ ಪರ ವಕೀಲರು ಕೋರಿದರು. ವಾದ ಆಲಿಸಿದ ನ್ಯಾಯಪೀಠ ಮುಂದಿನ ಮೂರು ವಾರಗಳ ಕಾಲ ಮುಷ್ಕರ ನಡೆಸದಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು. 

Similar News