ಎಸ್‌ಸಿ, ಎಸ್‌ಟಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ

Update: 2023-03-24 12:30 GMT

ಬೆಂಗಳೂರು, ಮಾ.24: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 9 ನೆ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರಕಾರ ಶಿಫಾರಸುಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಚಳವಳಿ ನಡೆಸಿದರು.

ಶುಕ್ರವಾರ ಇಲ್ಲಿನ ಕ್ವೀನ್ಸ್ ರಸ್ತೆಯಿಂದ ರಾಜಭವನವರೆಗೂ ಕಾಲ್ನಾಡಿಗೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು, ಎಸ್ಸಿ, ಎಸ್ಟಿ ಮೀಸಲಾತಿ ಸಂಬಂಧಶೆಡ್ಯೂಲ್ 9ಕ್ಕೆಸೇರ್ಪಡೆಗೊಳಿಸಲು ಕೋರಿ ಕೇಂದ್ರ ಸರಕಾರಕ್ಕೆ ವಿಳಂಬವಾಗಿ ಶಿಫಾರಸು ಮಾಡಿರುವ ವಿರುದ್ಧ ಆಕ್ರೋಶ ಹೊರಹಾಕಿ, ರಾಜಭವನ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇಲ್ಮನೆ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಈ ವೇಳೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ನಾವು ಪ್ರತಿಭಟನೆಗೆ ಕರೆ ಕೊಟ್ಟ ಬಳಿಕ ರಾಜ್ಯ ಸರಕಾರವೂ ಈಗ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಆದರೆ, ಈಗಾಗಲೇ ಶೇ.50ರಷ್ಟು ಇರುವ ಮೀಸಲಾತಿ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರಕಾರ ಉತ್ತರ ಕೊಟ್ಟಿದೆ. ಇದರ ಅಥವೇನು?. ರಾಜ್ಯ ಸರಕಾರದ ಮೀಸಲಾತಿ ಹೆಚ್ಚಳ ಮಾಡಿದರೂ ಕೇಂದ್ರ ಒಪ್ಪಲ್ಲ ಎಂದಲ್ಲವೇ? ಎಂದು ಟೀಕಿಸಿದರು.

ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ.50ರಷ್ಟು ಮೀರಬಾರದು ಎಂದಿದೆ. ಅದು ಮೀರಬೇಕಾದರೆ ಸಂವಿಧಾನದ 9ನೆ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು. ಆದರೆ, ಬಿಜೆಪಿ ಕೇವಲ ಮತಕ್ಕಾಗಿ ಹಾಗೂ ಜನರ ದಾರಿತಪ್ಪಿಸಲು ಮೋಸ ಮಾಡುತ್ತಿದ್ದಾರೆ ಎಂದ ಅವರು,ಶೋಷಿತ ಸಮುದಾಯಗಳಿಗೆ ಮೋಸ ಮಾಡಿರುವ ಬಿಜೆಪಿ ಸರಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ನಮ್ಮ ಒತ್ತಡಕ್ಕೆ ಮಣಿದ ರಾಜ್ಯ ಸರಕಾರ ಸಂಪುಟದಲ್ಲಿ ತೀರ್ಮಾನ ಮಾಡಿ ಸುಗ್ರೀವಾಜ್ಞೆ ಹೊರಡಿಸಿ ಅದನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. ನಂತರ ವಿಧಾನ ಮಂಡಲ ಅಧಿವೇಶನದಲ್ಲಿ ಈ ವಿಚಾರವಾಗಿ ಕಾನೂನು ತಂದಾಗ ನಾವು ಒಮ್ಮತದ ಬೆಂಬಲ ನೀಡಿ ಅನುಮೋದನೆ ನೀಡಿದೆವು. ನಂತರ ರಾಜ್ಯ ಸರಕಾರ ಇದನ್ನು ಕೇಂದ್ರಕ್ಕೆ ಕಳುಹಿಸಬೇಕಿತ್ತು. ಕಳೆದ ನಾಲ್ಕದು ತಿಂಗಳಿಂದ ಕೇಂದ್ರ ಸರಕಾರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲಿಲ್ಲ.ಈ ವಿಚಾರವಾಗಿ ಸಂಸತ್ತಿನಲ್ಲಿ ಪ್ರಶ್ನಿಸಿದಾಗ, ಕೇಂದ್ರ ಮಂತ್ರಿಗಳೇ ರಾಜ್ಯ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂಬ ಸತ್ಯಾಂಶ ಹೊರಬಂದಿತು ಎಂದು ಆರೋಪಿಸಿದರು.

ಪರಿಶಿಷ್ಟ ಜನರಿಗೆ ದೊಡ್ಡ ಸಹಾಯ ಮಾಡಿದ್ದೇವೆ ಎಂದು ಸುಳ್ಳು ಹೇಳುವ ಮೂಲಕ ಬಿಜೆಪಿ ಸರಕಾರ ಅವರಿಗೆ ದ್ರೋಹ ಮಾಡಿದೆ. ಈ ವಿಚಾರದಲ್ಲಿ ಈ ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಹೋರಾಟಕ್ಕೆ ಸಜ್ಜಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ಈ ಸರಕಾರದ ಸುಳ್ಳುನ್ನು ತಿಳಿಸಿ ನಮ್ಮ ಮನವಿ ಸಲ್ಲಿಸಿದ್ದೇವೆ. ಈಗ ಕಾಂಗ್ರೆಸ್ ಪಕ್ಷ ಹೋರಾಟ ಮಾಡಲು ಅವಕಾಶ ನೀಡದೇ ಬಂಧಿಸಿದೆ. ನಂತರ ನಾವು ನಮ್ಮ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಬಿಜೆಪಿ ಪಕ್ಷದವರು ಮೋಸ ಮಾಡುತ್ತಿದ್ದಾರೆ. ರಾತ್ರೋರಾತ್ರಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ನಾವು ಪ್ರತಿಭಟನೆ ನಡೆಸುತ್ತೇವೆಂಬ ಕಾರಣಕ್ಕೆ ಶಿಫಾರಸು ಮಾಡಿದ್ದಾರೆ. ಶೇ.50ಕ್ಕಿಂತಲೂ ಮೀಸಲಾತಿ ಪ್ರಮಾಣ ಹೆಚ್ಚುವಂತಿಲ್ಲ.ಈಗ ರಾಜ್ಯದಲ್ಲಿ ಒಟ್ಟು ಶೇ.56ರಷ್ಟು ಹೆಚ್ಚಿಸಿದರೆ ಮೀಸಲಾತಿ ಸಾಧ್ಯವಿದೆಯಾ?. ಒಂಬತ್ತನೇ ಶೆಡ್ಯೂಲ್‍ಗೆ ಯಾಕೆ ಸೇರಿಸುತ್ತಿಲ್ಲ. ಇದೆಲ್ಲಾ ಕೇವಲ ಸಮುದಾಯದ ಮತಗಳನ್ನು ಸೆಳೆಯುವ ತಂತ್ರವಷ್ಟೇ  ಎಂದು ವಾಗ್ದಾಳಿ ನಡೆಸಿದರು.

ಸಂಚಾರ ದಟ್ಟಣೆ: ಕಾಂಗ್ರೆಸ್ ನಾಯಕರು ರಾಜಭವನ ಚಲೋ ಚಳುವಳಿ ನಡೆಸಿದ ಹಿನ್ನೆಲೆಯಲ್ಲಿ ಕ್ವೀನ್ಸ್ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಕಂಡುಬಂತು. 

ಇದನ್ನೂ ಓದಿ: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವ

Similar News