ಕೋಲಾರಕ್ಕೆ ಘೋಷಣೆಯಾಗದ ಟಿಕೆಟ್; ವರುಣಾ ಸೇರಿ ಎರಡೂ ಕಡೆಯಿಂದ ಸಿದ್ದರಾಮಯ್ಯ ಸ್ಪರ್ಧೆ?

Update: 2023-03-25 06:14 GMT

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ ನ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿ ಉಸ್ತುವಾರಿ ಮುಕುಲ್ ವಾಸ್ನಿಕ್ ಶನಿವಾರ ಪ್ರಕಟಿಸಿದ್ದಾರೆ. 

ಮೊದಲ ಹಂತದ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ಘೋಷಿಸಲಾಗಿದ್ದು, ಆದರೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರು ಮೊದಲ ಪಟ್ಟಿಯಲ್ಲಿ ಬಹಿರಂಗವಾಗಿಲ್ಲ. ಅಲ್ಲಿಂದಲೂ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುವ ಸಾಧ್ಯತೆ ಇದೆ.

ಶುಕ್ರವಾರ ಟಿಕೆಟ್ ವಿಚಾರವಾಗಿ ಚಿತ್ರದುರ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಹಿತಿ ನೀಡಿದ್ದರು. ಜೊತೆಗೆ ತನ್ನ ಮನೆಯಲ್ಲಿ ವರುಣಾ ಜೊತೆಗೆ ಇನ್ನೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ ಎಂದು ಹೇಳುವ ಮೂಲಕ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. 

ಅಲ್ಲದೇ, 'ಸಿದ್ದರಾಮಯ್ಯ ಅವರು ಕೋಲಾರದಿಂದಲೂ ಸ್ಪರ್ಧಿಸಲಿದ್ದಾರೆ' ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ ಮೊದಲ ಹಂತದ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ಅಂತಿಮಗೊಳಿಸಿ, ಕೋಲಾರದಲ್ಲಿ ಟಿಕಟ್ ಘೋಷಿಸದೇ ಇರುವುದು ಕುತೂಹಲ ಮೂಡಿಸಿದೆ.  

ಇದನ್ನೂ ಓದಿ... ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ | ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ 

Similar News