ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಕಸ್ಟಡಿಗೆ

Update: 2023-03-28 10:51 GMT

ಬೆಂಗಳೂರು, ಮಾ.28: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು 5 ದಿನ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. 

ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ ನಂತರ ಸೋಮವಾರ ರಾತ್ರಿ ಅವರನ್ನು ಬಂಧಿಸಲಾಗಿತ್ತು.

ಇಂದು (ಮಂಗಳವಾರ)  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಅಧಿಕಾರಿಗಳು ಹಾಜರು ಪಡಿಸಿದ್ದರು. ಎ.1ರ ವರೆಗೆ ಲೋಕಾಯುಕ್ತ ವಶಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದರು.

ಪ್ರಕರಣದ ಹಿನ್ನೆಲೆ: ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರರೂ ಆದ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್‍ಡಿಎಲ್) ಕಚ್ಚಾ ತೈಲ ಪೂರೈಸುವ ಗುತ್ತಿಗೆಯ  ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ನಡುವೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿಸಿ ಎಫ್‍ಐಆರ್ ದಾಖಲಿಸಿದ್ದರು. ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 7 (ಎ) ಮತ್ತು (ಬಿ), 7 ಎ, 8, 9 ಮತ್ತು 10ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. 

Similar News