ಜೆಡಿಎಸ್ ತೊರೆದು ಬಿಜೆಪಿ ಸೇರಿದ ಮಾಜಿ ಶಾಸಕ ಎ.ಟಿ ರಾಮಸ್ವಾಮಿ

Update: 2023-04-01 12:32 GMT

ಬೆಂಗಳೂರು, ಎ.1: ಜೆಡಿಎಸ್ ಶಾಸಕ ಸ್ಥಾನಕ್ಕೆ ನಿನ್ನೆಯಷ್ಟೆ ರಾಜೀನಾಮೆ ನೀಡಿದ್ದ ಎ.ಟಿ.ರಾಮಸ್ವಾಮಿ ಅವರು ಶನಿವಾರ ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಹಾಸನ ಜಿಲ್ಲಾ ರಾಜಕೀಯದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಪಾರುಪತ್ಯದ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಅರಕಲಗೂಡು ಕ್ಷೇತ್ರದ ಶಾಸಕರಾಗಿದ್ದ ಎ.ಟಿ.ರಾಮಸ್ವಾಮಿ, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಕಾಂಗ್ರೆಸ್ ಸೇರ್ಪಡೆಯಾಗುವ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ರಾಮಸ್ವಾಮಿ ಚರ್ಚೆಯನ್ನೂ ನಡೆಸಿದ್ದರು ಎನ್ನಲಾಗಿದೆ. ಆದರೆ, ಅಂತಿಮವಾಗಿ ಅವರು ಕಾಂಗ್ರೆಸ್ ಬದಲಾಗಿ ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ 1989, 1994ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಎ.ಟಿ.ರಾಮಸ್ವಾಮಿ, 2004 ಹಾಗೂ 2018ರಲ್ಲಿ ಜೆಡಿಎಸ್ ಪಕ್ಷದಿಂದ ಚುನಾಯಿತರಾಗಿದ್ದರು. ಹೊಸದಿಲ್ಲಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ಎ.ಟಿ.ರಾಮಸ್ವಾಮಿ ಅವರಿಗೆ ಬಿಜೆಪಿ ಸದಸ್ಯತ್ವ ನೀಡಿ, ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ.ರಾಮಸ್ವಾಮಿ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಹರ್ಷ ತಂದಿದೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲ ನಾಯಕರು ನನಗೆ ಸಂತೋಷದಿಂದ ಪಕ್ಷಕ್ಕೆ ಬರ ಮಾಡಿಕೊಂಡಿದ್ದಾರೆ ಎಂದರು.

ಬಿಜೆಪಿ ಪಕ್ಷದ ಕಾರ್ಯಶೈಲಿ ಹಾಗೂ ದೇಶದ ಅಭಿವೃದ್ಧಿಯ ಹಾದಿಯನ್ನು ಗಮನಿಸಿದ್ದೇನೆ. ರಾಜಕೀಯವಾಗಿ ಸಾರ್ವಜನಿಕ ಜೀವನದಲ್ಲಿ ನಾನು ಯಾವತ್ತು ಯಾವುದನ್ನು ಬಯಸಿದವನಲ್ಲ. ಹಣ ಬಲವಿಲ್ಲದ ಸಂತ್ರಸ್ತ ನಾನು. ಭ್ರಷ್ಟಾಚಾರದ ವಿರುದ್ಧ ಸದಾ ಹೋರಾಟ ಮಾಡಿದವನು. ಜನರ ಸೇವೆ ಮಾಡಲು ಯಾವುದೆ ಷರತ್ತು ಇಲ್ಲದೆ ನಾನು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ಅವರು ಹೇಳಿದರು.

ನಾನು ಯಾವುದೆ ಶಾಸಕ ಸ್ಥಾನದ ಆಕಾಂಕ್ಷಿಯೂ ಅಲ್ಲ, ಯಾವುದೆ ಹುದ್ದೆಯನ್ನು ಬಯಸುವುದಿಲ್ಲ. ಅವಕಾಶ ಕೊಟ್ಟರೆ ಜನರ ಸೇವೆ ಮಾಡುತ್ತೇನೆ ಎಂದು ಎ.ಟಿ.ರಾಮಸ್ವಾಮಿ ತಿಳಿಸಿದರು.

Similar News