ಮಂಗಳೂರು ದಕ್ಷಿಣ: ನ್ಯಾಯವಾದಿ ಪದ್ಮರಾಜ್‌ಗೆ ಕಾಂಗ್ರೆಸ್ ಟಿಕೆಟ್ ?
ಮಂಗಳೂರು: ಕ್ರೈಸ್ತ ಮತದಾರರು ಅಧಿಕ ಸಂಖ್ಯೆಯಲ್ಲಿರುವ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಫೌಂಡೇಶನ್‌ನ ಸಂಸ್ಥಾಪಕ, ನ್ಯಾಯವಾದಿ ಪದ್ಮರಾಜ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಿಲ್ಲೆಯ 8 ಕ್ಷೇತ್ರಗಳ ಪೈಕಿ 5 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಘೋಷಿಸಿದೆ. ಆದರೆ ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯು ಹೈಕಮಾಂಡ್‌ಗೆ ಸವಾಲಾಗಿ ಪರಿಣಮಿಸಿತ್ತು.
ಪದ್ಮರಾಜ್ ಕಾಂಗ್ರೆಸ್ ಪಕ್ಷದ ಸದಸ್ಯರಲ್ಲ, ಟಿಕೆಟ್‌ಗಾಗಿ ಅರ್ಜಿಯನ್ನೂ ಸಲ್ಲಿಸಿಲ್ಲ. ಆದರೆ, ಕಳೆದ ಕೆಲವು ಸಮಯದಿಂದ ಬಿಜೆಪಿ ಮತ್ತು ಸರಕಾರದ ಕಾರ್ಯವೈಖರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಬಿಜೆಪಿ ಸರಕಾರ ಬಿಲ್ಲವರಿಗೆ ಮಾಡುತ್ತಿರುವ ಅನ್ಯಾಯದ ವಿರುದ್ಧ ಸಮುದಾಯದಲ್ಲಿ ಜಾಗೃತಿಯನ್ನೂ ಮೂಡಿಸುತ್ತಿದ್ದರು ಎನ್ನಲಾಗಿದೆ.
ಜಿಲ್ಲೆಯಲ್ಲಿ ಕನಿಷ್ಟ 2 ಕ್ಷೇತ್ರದಲ್ಲಿ ಬಿಲ್ಲವರಿಗೆ ಟಿಕೆಟ್ ನೀಡಲು ಬಯಸಿರುವ ಹೈಕಮಾಂಡ್ ಈಗಾಗಲೆ ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಲ್ಲವ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಇನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಲ್ಲವ ಸಮುದಾಯಕ್ಕೆ ಟಿಕೆಟ್ ನೀಡದಿದ್ದರೆ ಅದು ಜಿಲ್ಲೆಯ ಇತರ ಕ್ಷೇತ್ರಗಳ ಮೇಲೂ ಪರಿಣಾಮ ಬೀರಬಹುದು ಎಂದು ಭಾವಿಸಿರುವ ಹೈಕಮಾಂಡ್ ಮಂಗಳೂರು ನಗರ ದಕ್ಷಿಣದಲ್ಲಿ ಪದ್ಮರಾಜ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ಬುಲಾವ್ ಮೇರೆಗೆ ರವಿವಾರ ಪದ್ಮರಾಜ್ ಹೊಸದಿಲ್ಲಿಗೆ ತೆರಳಿದ್ದಾರೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಮತ್ತಷ್ಟು ಕುತೂಹಲ ಮೂಡಿಸಿದೆ. ಈ ಬಗ್ಗೆ ಪದ್ಮರಾಜ್ ಸದ್ಯ ಯಾವುದೇ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.