ಹುಬ್ಬಳ್ಳಿ: ಪಶ್ಚಿಮ ಟಿಕೆಟ್ ಬೇಡ, ಸೆಂಟ್ರಲ್ ಟಿಕೆಟ್ ಕೊಡಿ; ಕಾಂಗ್ರೆಸ್‌ಗೆ ಅಂಜುಮನ್ ಆಗ್ರಹ
ಹುಬ್ಬಳ್ಳಿ: ಒಂದೆಡೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ (Congress) ಟಿಕೆಟ್ ನೀಡಬಾರದೆಂಬ ಆಗ್ರಹ ಕೇಳಿ ಬರುತ್ತಿದ್ದಂತೆ, ಇನ್ನೊಂದೆಡೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲೂ ಅಲ್ಪಸಂಖ್ಯಾತರಿಗೆ ಟಿಕಟ್ ನೀಡಬೇಕೆಂದು ಅಂಜುಮನ್ ಇಸ್ಲಾಂ ಸಂಸ್ಥೆ ಆಗ್ರಹಿಸಿದೆ.
ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದ ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, “ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ” ಎಂದು ಖರ್ಗೆಗೆ ಮನವಿ ಮಾಡಿದ್ದಾರೆ.
ಅರವಿಂದ ಬೆಲ್ಲದ ಸ್ಪರ್ಧೆ ಮಾಡುವಂತಹ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ ನಡೆದ ನಾಲ್ಕು ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು. ಅಲ್ಪಸಂಖ್ಯಾತ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿಯೂ ಅದೇ ರೀತಿ ಆಗುತ್ತದೆ. ಹಾಗಾಗಿ, ಅಲ್ಪಸಂಖ್ಯಾತರಿಗೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಬದಲಾಗಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡುವಂತಹ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು. ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ದೀಪಕ್ ಚಿಂಚೋರೆ ಅವರಿಗೆ ಟಿಕೆಟ್ ನೀಡಬೇಕು ಎಂದು ಪತ್ರದಲ್ಲಿ ಮನವಿಯನ್ನು ಮಾಡಲಾಗಿದೆ.
ದೀಪಕ್ ಚಿಂಚೋರೆ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ, ಪಕ್ಷ ಸಂಘಟನೆ ಮಾಡಿದ್ದಾರೆ. ಆದ್ದರಿಂದ ಪಶ್ಚಿಮ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವುದು ಬೇಡ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ 54 ಸಾವಿರ ಅಲ್ಪಸಂಖ್ಯಾತ ಮತಗಳಿವೆ. ಈ ಹಿಂದೆ ಇಲ್ಲಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಹಾಗಾಗಿ ಈ ಚುನಾವಣೆಯಲ್ಲಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದ್ದು, ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸಿದೆ ಹೋದ್ರೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಶಕ್ತಿ ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಬೆನ್ನೆಲುಬು ಅಲ್ಪಸಂಖ್ಯಾತ ಸಮುದಾಯ. ನಮ್ಮನ್ನು ಕೇವಲ ಮತ ಹಾಕಲು ಬಳಸಿಕೊಳ್ಳಬೇಡಿ. ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ, ಒಂದು ವೇಳೆ ಟಿಕೆಟ್ ನೀಡದೆ ಹೋದ್ರೆ ಅಲ್ಪಸಂಖ್ಯಾತ ಸಮುದಾಯ ನಿಮ್ಮ ವಿರುದ್ಧ ತಿರುಗಿ ಬೀಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.