ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಸೋಮಣ್ಣ
ಬೆಂಗಳೂರು: ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದ್ದು, ವಸತಿ ಸಚಿವ ವಿ.ಸೋಮಣ್ಣ ಅವರ ಹೆಸರು ಕೇಳಿ ಬಂದಿತ್ತು.
ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮಣ್ಣ ಅವರೇ ಸ್ಪಷ್ಟನೆ ನೀಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸಿದ್ದರಾಮಯ್ಯ ಮತ್ತು ನಾನು ಒಂದು ಕಾಲದ ಸ್ನೇಹಿತರು. ನಾವು ಒಟ್ಟಿಗೆ ರಾಜಕೀಯ ಪ್ರವೇಶ ಮಾಡಿದ್ದೇವೆ. ಮುಖ್ಯಮಂತ್ರಿ ಆಗಿ ಅವರು ಹಲವು ಕೆಲಸ ಕಾರ್ಯ ಮಾಡಿದ್ದಾರೆ. ಚುನಾವಣೆಯಲ್ಲಿ ಯಾರು ನಿಲ್ಲುವುದು ಬಿಡುವುದು ಬಿಟ್ಟು ಇತಿಹಾಸ ನೋಡಬೇಕು. ಪಕ್ಷ ಯಾರನ್ನ ನಿಲ್ಲಿಸುತ್ತೋ ಅವರು ನಿಲ್ಲಬೇಕು. ಅದು ಸಾಂಕೇತಿಕವಾಗಿ ನಡೆಯುತ್ತಿರುತ್ತದೆ. ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವುದು ವದಂತಿ' ಎಂದು ಸ್ಪಷ್ಟಪಡಿಸಿದರು.
ಇನ್ನು ಸಿದ್ದರಾಮಯ್ಯ ವಿರುದ್ಧ ಬಿವೈ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆ ಊಹಾಪೋಹಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಈಗಾಗಲೇ ತೆರೆ ಎಳೆದಿದ್ದಾರೆ.