ಕೈ ತಪ್ಪಿದ ಟಿಕೆಟ್: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ MLC ನಾಗರಾಜ ಛಬ್ಬಿ
ಬೆಂಗಳೂರು, ಎ.9: ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದ ವಿಧಾನಪರಿಷತ್ ಮಾಜಿ ಸದಸ್ಯ ನಾಗರಾಜಛಬ್ಬಿ ರವಿವಾರ ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಸಂತೋಷ್ ಲಾಡ್‍ಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರುವ ಹಿನ್ನೆಲೆಯಲ್ಲಿ, ನಾಗರಾಜ ಛಬ್ಬಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.
ಕಲಘಟಗಿಯಲ್ಲಿ ಹಾಲಿ ಬಿಜೆಪಿ ಶಾಸಕ ಸಿ.ಎಂ.ನಿಂಬಣ್ಣವರ್(76 ವರ್ಷ) ಇದ್ದು, ಈ ಬಾರಿಗೆ ಅವರಿಗೆ ಟಿಕೆಟ್ ಸಿಗುವುದು ಅನುಮಾನವಾಗಿದೆ. ಬಿಜೆಪಿ ಹೈಕಮಾಂಡ್ ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡದೆ ಇರುವುದರಿಂದ, ನಾಗರಾಜ ಛಬ್ಬಿಗೆ ಅವಕಾಶ ಸಿಗುವ ಸಾಧ್ಯತೆಗಳನ್ನು ಅಲ್ಲಗೆಳೆಯುವಂತಿಲ್ಲ.