ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ, ಎ. 11: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಹೈಕಮಾಂಡ್ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿ ತೀವ್ರ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಮತದಾನಕ್ಕೆ ದಿನಗಣನೇ ಆರಂಭವಾಗಿರುವ ಸಂದರ್ಭದಲ್ಲೇ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ‘ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ. ಹೀಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು’ ಎಂದು ಮನವಿ ಮಾಡಿದ್ದಾರೆ.
‘ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪಮುಖ್ಯಮಂತ್ರಿಯ ವರೆಗೂ ಗೌರವದ ಸ್ಥಾನ ನೀಡಿದ ಪಕ್ಷದ ಎಲ್ಲ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು’ ಎಂದು ಈಶ್ವರಪ್ಪಅವರು ಪತ್ರದಲ್ಲಿ ತಿಳಿಸಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲೇ ಇರುವ ಈಶ್ವರಪ್ಪ ಅವರು ಇ-ಮೇಲ್ ಮೂಲಕ ನಡ್ಡಾ ಅವರಿಗೆ ಪತ್ರ ರವಾನಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೇಳಿದ್ದು, ಪಕ್ಷದ ವರಿಷ್ಠರು ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಸೂತ್ರದ ಹಿನ್ನೆಲೆಯಲ್ಲಿ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆಂದು ಹೇಳಲಾಗಿದೆ.
ಇತ್ತೀಚೆಗಷ್ಟೇ ಕುಂದಾಪುರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು.