ರಾಜ್ಯ ವಿಧಾನಸಭಾ ಚುನಾವಣೆ: ದ.ಕ.ಜಿಲ್ಲೆಯಲ್ಲಿ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
Update: 2023-04-15 20:58 IST
ಮಂಗಳೂರು, ಎ.15: ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಶನಿವಾರ ಮಂಗಳೂರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮೂವರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಯು ಪಕ್ಷದ ಅಭ್ಯರ್ಥಿಯಾಗಿ ಕೃಷ್ಣ ಪೂಜಾರಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ 2 ನಾಮಪತ್ರಗಳನ್ನು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಉಳಿದಂತೆ ಬೆಳ್ತಂಗಡಿ, ಮೂಡುಬಿದಿರೆ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಈವರೆಗೆ 5 ಮಂದಿ ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಎಪ್ರಿಲ್ 20 ಕೊನೆಯ ದಿನವಾಗಿದೆ.