ಬಿಜೆಪಿ ತ್ಯಜಿಸುವ ವದಂತಿ ಕುರಿತು ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಸತ್ಯಕ್ಕೆ ದೂರವಾದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಾನು ಬಿಜೆಪಿ ಬಿಡುವ ಪ್ರಶ್ನೆಯೆ ಇಲ್ಲ ಎಂದು ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಸ್ಪಷ್ಟಪಡಿಸಿದ್ದಾರೆ.
ರವಿವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನನ್ನು ಸಂಪರ್ಕಿಸಿದ್ದು, ಮಹದೇವಪುರ ಕ್ಷೇತ್ರದ ಟಿಕೆಟ್ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ‘ಗುರುರಾಜ್ ಅಂಜನ್’ ಎಂಬವರು ಪೋಸ್ಟ್ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.
ಆದರೆ, ಅಂತಹ ಯಾವುದೆ ಚರ್ಚೆಗಳು ನಡೆದಿಲ್ಲ. ಡಿ.ಕೆ.ಶಿವಕುಮಾರ್ ನನ್ನನ್ನು ಸಂಪರ್ಕಿಸಿಲ್ಲ. ನಾನು ಬಿಜೆಪಿ ಬಿಡುವ ಪ್ರಶ್ನೆಯೆ ಉದ್ಭವಿಸುವುದಿಲ್ಲ ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ.
ರಾಜ್ಯ ಬಿಜೆಪಿ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದರೂ, ಹಾಲಿ ಶಾಸಕರಾಗಿರುವ ಅರವಿಂದ ಲಿಂಬಾವಳಿ ಹೆಸರನ್ನು ಪ್ರಕಟಿಸದೆ ಇರುವುದರಿಂದ, ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳು ಎದ್ದಿವೆ. ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟಣೆ ನೀಡಿದ್ದಾರೆ.