'ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಸಾವು
ಮುಂಬೈ: ನವಿಮುಂಬೈನ ಖರ್ಘಾರ್‌ನಲ್ಲಿ ನಡೆದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ಝಳಕ್ಕೆ 11 ಮಂದಿ ಮೃತಪಟ್ಟಿದ್ದಾರೆ ಎಮದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪ್ರಕಟಿಸಿದೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಏಕನಾಥ ಶಿಂಧೆ ಘೋಷಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ಎಲ್ಲರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
"ಡಾ. ಅಪ್ಪಾಸಾಹೇಬ್ ಧರ್ಮಾಧಿಕಾರಿ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಖರ್ಘಾರ್‌ನಲ್ಲಿ ಇಂದು ನಡೆದಿದ್ದು, ಬಿಸಿಲಿನ ಝಳಕ್ಕೆ ಅಸ್ವಸ್ಥಗೊಂಡ ಕೆಲ ಮಂದಿ ಶ್ರೀ ಸದಸ್ಯರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು. ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ದುರಾದೃಷ್ಟವಶಾತ್ 11 ಮಂದಿ ಮೃತಪಟ್ಟಿದ್ದಾರೆ. ಇದು ತೀರಾ ಅನಿರೀಕ್ಷಿತ ಹಾಗೂ ನೋವಿನ ಘಟನೆ. ಮೃತಪಟ್ಟ ಎಲ್ಲ ಶ್ರೀ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದೇವೆ. ಘಟನೆ ಬಗ್ಗೆ ಮಾಹಿತಿ ಬಂದ ರಕ್ಷಣ ನಾನು ಎಂಜಿಎಚ್ ಆಸ್ಪತ್ರೆಗೆ ಧಾವಿಸಿ ವೈದ್ಯರು ಹಾಗೂ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಸದಸ್ಯರ ಜತೆ ಚರ್ಚಿಸಿದ್ದೇನೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ನೀಡುವಂಎ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಶ್ರೀ ಸದಸ್ಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ" ಎಂದು ಶಿಂಧೆ ಟ್ವೀಟ್ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಗೃಹಸಚಿವ ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡಿದ್ದರು. ಸಿಎಂ ಏಕನಾಥ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪಾಲ್ಗೊಂಡಿದ್ದರು.