×
Ad

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

Update: 2023-04-17 14:39 IST

ಉಡುಪಿ, ಎ.17: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮೊದಲು ಕುಟುಂಬ ಸಮೇತ ಸನ್ಯಾಸಿ ಮಠ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಸ್ವಾಮೀಜಿ ಆಶೀರ್ವಾದ ಪಡೆದರು. ಬಳಿಕ ಬ್ರಹ್ಮಗಿರಿಯ ನಾಯರ್ ಕೆರೆ ಹಾಶ್ಮಿ ಜಾಮೀಯ ಮಸೀದಿ ಮತ್ತು ಉಡುಪಿ ಶೋಕ ಮಾತ ಇಗರ್ಜಿಗೆ ಭೇಟಿ ನೀಡಿದರು.

ಉಡುಪಿ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಪಾದಯಾತ್ರೆಯ ಮೂಲಕ ತಾಲೂಕು ಕಚೇರಿಗೆ ತೆರಳಿ ಉಡುಪಿ ತಾಲೂಕು ಚುನಾವಣಾಧಿಕಾರಿ ಸೀತಾ ಎಂ.ಸಿ. ಅವರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಸಾದ್‌ರಾಜ್ ಕಾಂಚನ್, ಉಡುಪಿಯಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಿ ಯುವಜನತೆಗೆ ಉದ್ಯೋಗ ಸೃಷ್ಠಿ ಮಾಡುವ ಯೋಜನೆಗಳನ್ನು ರೂಪಿಸಬೇಕಾಗಿದೆ. ಮೀನುಗಾರಿಕೆ, ಪ್ರವಾಸೋದ್ಯಮ, ಕೈಗಾರಿಕೆ, ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರವನ್ನು ಆದ್ಯತೆ ಮೇರೆಗೆ ಅಭಿವೃದ್ದಿ ಪಡಿಸಲಾಗುವುದು ಎಂದರು.

ಯುವ ಮತದಾರರನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷದಲ್ಲಿ ಈ ಬಾರಿ ಯುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಉಡುಪಿ ಕ್ಷೇತ್ರದಲ್ಲಿ ನಮಗೆ ತುಂಬಾ ಸವಾಲು ಕೂಡ ಇದೆ. ಸ್ಟಾರ್ ಕ್ಯಾಂಪೈನ್ ಮೂಲಕ ಪ್ರಚಾರ ಕಾರ್ಯವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿರುವ ಕೃಷ್ಣಮೂರ್ತಿ ಆಚಾರ್ಯರನ್ನು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇವೆ. ನಾಮಪತ್ರ ಸಲ್ಲಿಸಿದರೂ ಅದನ್ನು ಹಿಂತೆಗೆದುಕೊಳ್ಳಲು ಅವಕಾಶ ಇದೆ. ಅಲ್ಲಿಯವರೆಗೆ ನಾವು ಕಾಯುತ್ತೇವೆ. ವರಿಷ್ಠರ ಮುಂದೆ ಅವರು ಕೆಲವು ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಅದನ್ನು ಈಡೇರಿಸಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಸರಳಾ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಮುಖಂಡರಾದ ಕುಶಲ್ ಶೆಟ್ಟಿ ಹಾಗೂ ಮೈರ್ಮಾಡಿ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು. 

Similar News