ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಸಂಕಷ್ಟ: ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ ಕೋರ್ಟ್

Update: 2023-04-18 08:55 GMT

ಧಾರವಾಡ, ಎ.18: ಧಾರವಾಡ ಜಿಪಂ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ತಮಗೆ ಧಾರವಾಡ ಪ್ರವೇಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ವಜಾಗೊಳಿಸಿದೆ. 

ಈ ಹಿಂದೆ ಧಾರವಾಡ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಕೂಡ ನಿರಾಕರಿಸಿತ್ತು ಎಂದು ಮನವರಿಕೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಅನುಮತಿಯನ್ನು ನಿರಾಕರಿಸಿದ್ದಾರೆ. 

2016ರ ಜೂನ್ ನಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಹತ್ಯೆಯಾಗಿತ್ತು. ನವೆಂಬರ್ 2020 ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು.  ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ಕೂಡ ನೀಡಿತ್ತು. 

ಮೇ 10ರಂದು ನಡೆಯುವ ಚುನಾವಣೆಗೆ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ ಪರವಾಗಿ ಈಗಾಗಲೇ ಅವರ ಪತ್ನಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ ಇದೀಗ ಕೋರ್ಟ್ ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸಿರುವುದರಿಂದ ವಿನಯ್ ಕುಲಕರ್ಣಿ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

Similar News