ಕಾಂಗ್ರೆಸ್‌ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

Update: 2023-04-21 09:55 GMT

ಬೆಂಗಳೂರು: ಚುನಾವಣಾ ಪ್ರಚಾರ ನಿಮಿತ್ತ ಧಾರವಾಡ ಜಿಲ್ಲೆ ಪ್ರವೇಶಿಸಿ 30 ದಿನಗಳ ಕಾಲ ಅಲ್ಲಿಯೇ ಇರಲು ಅನುಮತಿ ನೀಡಬೇಕು ಎಂದು ಕೋರಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಲಕರ್ಣಿ ಅವರ ಅರ್ಜಿಯನ್ನು ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ. 

ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೆ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯದ ಅನುಮತಿ ಪಡಯದೇ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ ನಾಲ್ಕು ಷರತ್ತುಗಳನ್ನು ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡುವಾಗ ಸುಪ್ರೀಂ ಕೋರ್ಟ್ ವಿಧಿಸಿತ್ತು.

ಅಲ್ಲದೆ, ಚುನಾವಣಾ ಪ್ರಚಾರಕ್ಕಾಗಿ ಧಾರವಾಡ ಜಿಲ್ಲೆ ಪ್ರವೇಶಕ್ಕೆ 50 ದಿನಗಳ ಕಾಲ ಅಲ್ಲಿಯೇ ಇರಲು ಅನುಮತಿ ನೀಡಬೇಕು ಎಂದು ಕೋರಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಿರಸ್ಕರಿಸಿತ್ತು. 

ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿನಯ್ ಕುಲಕರ್ಣಿ ಅವರ ಪರವಾಗಿ ಪತ್ನಿ ಶಿವಲೀಲಾ ಕುಲಕರ್ಣಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

Similar News