×
Ad

ಅಯೋಧ್ಯೆಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ: 7 ಮಂದಿ ಮೃತ್ಯು, 40 ಕ್ಕೂ ಹೆಚ್ಚು ಜನರಿಗೆ ಗಾಯ

Update: 2023-04-22 09:56 IST

ಲಕ್ನೊ: ಉತ್ತರ ಪ್ರದೇಶದ ಅಯೋಧ್ಯೆಯ ಲಕ್ನೋ-ಗೋರಖ್‌ಪುರ ಹೆದ್ದಾರಿಯಲ್ಲಿ ಟ್ರಕ್‌ಗೆ ಪ್ರಯಾಣಿಕರ ಬಸ್ ವೊಂದು  ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಬಸ್ ಪಕ್ಕಕ್ಕೆ ಉರುಳಿ ಬಿದ್ದಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಅಯೋಧ್ಯೆಯಿಂದ ಬರುತ್ತಿದ್ದ ಖಾಸಗಿ ಬಸ್  ಅಂಬೇಡ್ಕರ್ ನಗರಕ್ಕೆ ತೆರಳಲು ಹೆದ್ದಾರಿಯಲ್ಲಿ ತಿರುವು ಪಡೆಯಲು ಯತ್ನಿಸಿದಾಗ ಈ ಅವಘಡ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.

ಸುಮಾರು 12 ಜನರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. 5 ಮಂದಿಯನ್ನು ಜಿಲ್ಲಾಸ್ಪತ್ರೆಗೆ ಮತ್ತು 7 ಮಂದಿಯನ್ನು ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಕೆಲವು ಸಾವು ನೋವುಗಳೂ ಸಂಭವಿಸಿವೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಉಂಟಾಗಿರುವ ಪ್ರಾಣಹಾನಿಗಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಅವರ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ.

Similar News