ಬಾಂಬಿಲ: ರಸ್ತೆ ಅಪಘಾತಕ್ಕೆ ಯುವಕ ಬಲಿ, ಸಹ ಸವಾರ ಗಂಭೀರ
ಪುಂಜಾಲಕಟ್ಟೆ, ಎ.28: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು,ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಎಂದು ಗುರುತಿಸಲಾಗಿದೆ. ಸಹಸವಾರ ಸಂದೀಪ್ ಅವರ ನೆರೆಮನೆ ನಿವಾಸಿ ಆಕಾಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ವೃತ್ತಿಯಲ್ಲಿ ವೆಲ್ಡರ್ ಆಗಿರುವ ಇವರಿಬ್ಬರು ಶುಕ್ರವಾರ ಬೆಳಗ್ಗೆ ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ ಲೋಬೋ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.