ಕಾಂಗ್ರೆಸ್‍ಗೆ ಸೋಲು ಕಟ್ಟಿಟ್ಟ ಬುತ್ತಿ: ಮುಖ್ಯಮಂತ್ರಿ ಬೊಮ್ಮಾಯಿ

Update: 2023-04-29 16:23 GMT

ಬೀದರ್: ‘ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಲಿಂಗಾಯತರು ಭ್ರಷ್ಟರು ಎಂದು ಹೇಳಿದರು. ರಾಜ್ಯದ ಅತ್ಯಂತ ಭ್ರಷ್ಟ ಸರಕಾರ ಸಿದ್ದರಾಮಯ್ಯ ನೇತೃತ್ವದ ಸರಕಾರ. ಪ್ರಧಾನಿ ಮೋದಿಯವರ ಕುರಿತು ಮಲ್ಲಿಕಾರ್ಜುನ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದರು. ಮೋದಿ ಎಂದರೆ ಕಾಂಗ್ರೆಸ್‍ಗೆ ಸೋಲು ಕಟ್ಟಿಟ್ಟ ಬುತ್ತಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಜಿಲ್ಲೆಯ ಹುಮನಾಬಾದ್‍ನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಆಯೋಜಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ವಿಶ್ವಮಾನವ ಬಸವಣ್ಣನ ನಾಡಲ್ಲಿ ವಿಶ್ವ ನಾಯಕ ಮೋದಿಯವರಿಗೆ ಸ್ವಾಗತ. ಪ್ರಜಾಪ್ರಭುತ್ವದ ಮೊದಲನೆ ಕರ್ತವ್ಯ ಎಲ್ಲರನ್ನೂ ಸಮಾನವಾಗಿ ನೋಡುವುದು. ಕಾಂಗ್ರೆಸ್ ಇಷ್ಟು ವರ್ಷ ಅದನ್ನು ಮಾಡಿಲ್ಲ. ನಾವು ಎಲ್ಲ ಸಮುದಾಯಗಳನ್ನು ಸಮಾನವಾಗಿ ನೋಡುತ್ತಿದ್ದೇವೆ’ ಎಂದು ನುಡಿದರು.

‘ಪ್ರಧಾನಿ ಮೋದಿ ಅವರು ಇಡೀ ದೇಶ ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಕರ್ನಾಟಕದಲ್ಲಿ 13 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದಾರೆ. ಜಲ ಜೀವನ್ ಮಿಷನ್ ಅಡಿಯಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 54 ಲಕ್ಷ ರೈತರಿಗೆ 16ಸಾವಿರ ಕೋಟಿ ರೂ.ನೆರವು ನೀಡಿದ್ದೇವೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಟೆಕ್ಸ್‍ಟೈಲ್ ಪಾರ್ಕ್ ನೀಡಿದ್ದಾರೆ. ಇದರಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. ಬೀದರ್ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಳುಹಿಸಿಕೊಡಬೇಕು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ತಿಳಿಸಿದರು.

Similar News