ಆಕ್ಷೇಪಾರ್ಹ ಹೇಳಿಕೆ: ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ನೋಟಿಸ್ ಜಾರಿ ಮಾಡಿದ ಚುನಾವಣಾ ಆಯೋಗ

Update: 2023-05-03 14:31 GMT

ಬೆಂಗಳೂರು, ಮೇ 3: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ಧ ನೀಡಿದ ಹೇಳಿಕೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪ್ರಧಾನಿ ವಿರುದ್ಧ ತಾವು ನೀಡಿರುವ ಹೇಳಿಕೆಯು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಭಾರತೀಯ ಚುನಾವಣಾ ಆಯೋಗದ ಕಾರ್ಯದರ್ಶಿ ಬಿ.ಸಿ.ಪಾತ್ರ ಶೋಕಾಸ್ ನೋಟಿಸ್‍ನಲ್ಲಿ ತಿಳಿಸಿದ್ದಾರೆ.

ಅದೇ ರೀತಿ, ತಮ್ಮ ಪ್ರತಿಸ್ಪರ್ಧಿ ಪಕ್ಷದ ನಾಯಕಿಯ ವಿರುದ್ಧ ವೈಯಕ್ತಿಕ ಟೀಕೆಯನ್ನು ಮಾಡಿರುವುದು ಚುನಾವಣಾ ಮಾದರಿ ನೀತಿ ಸಂಹಿತಿಯೆ ಉಲ್ಲಂಘನೆಯಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್‍ಗೆ ಶೋಕಾಸ್ ನೋಟಿಸ್ ನೀಡಿರುವ ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಆದುದರಿಂದ, ಮೇ 4ರಂದು ಸಂಜೆ 5 ಗಂಟೆಯೊಳಗಾಗಿ ತಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು. ಒಂದು ವೇಳೆ ಈ ನೋಟಿಸ್‍ಗೆ ತಾವು ಸ್ಪಂದಿಸದಿದ್ದರೆ ಚುನಾವಣಾ ಆಯೋಗವು ಮುಂದಿನ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಇಬ್ಬರು ಶಾಸಕರಿಗೆ ನೋಟಿಸ್‍ನಲ್ಲಿ ತಿಳಿಸಲಾಗಿದೆ. 

Similar News