ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಆಡಿಯೋ ವೈರಲ್ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2023-05-06 08:46 GMT

ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕುರಿತು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರದ್ದೆನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಕುರಿತು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆಡಿಯೋ ತಿರುಚಲಾಗಿದೆಯೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಬೇಕಿದೆ. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕುರಿತು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದನ್ನು  ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬಿಡುಗಡೆ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. 

Similar News