ಮೇ 9,10 ರಂದು ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗೆ ನಿರ್ಬಂಧ: ಮಾಧ್ಯಮಗಳಿಗೆ ಮಾರ್ಗಸೂಚಿ ಹೊರಡಿಸಿದ ಆಯೋಗ

Update: 2023-05-07 15:11 GMT

ಬೆಂಗಳೂರು, ಮೇ 7: ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಸಂಬಂಧಿ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯ. ಉದ್ದೇಶಿತ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.

ಟಿವಿ/ರೇಡಿಯೋ/ಕೇಬಲ್ ನೆಟ್ ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನ ಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಪ್ರಸಾರ ಮಾಡುವಂತಿಲ್ಲ.

ನಿಗದಿತ 48 ಗಂಟೆಗಳ ಅವಧಿಯಲ್ಲಿ ‘ಒಪಿನಿಯನ್ ಪೋಲ್’ ಫಲಿತಾಂಶ ಪ್ರಕಟಿಸುವುದು ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 126ರ ವ್ಯಾಪ್ತಿಯಲ್ಲಿ ಬರುತ್ತದೆ. ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಅಂಗವಾಗಿ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದುದರಿಂದ ಎಲ್ಲ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮಗಳು ಮೇ 8ರ ಸಂಜೆ 6 ಗಂಟೆಯಿಂದ ಮೇ 10ರ ಸಂಜೆ 6.30ರ ವರೆಗೆ ಮೇಲ್ಕಂಡ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಆಯೋಗ ನಿರ್ದೇಶ ನೀಡಿದೆ.

Similar News