ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Update: 2023-05-08 14:46 GMT

ಬೆಂಗಳೂರು, ಮೇ 8: ಕಾಂಗ್ರೆಸ್ ಪಕ್ಷದ ಮೊದಲ ಕುಟುಂಬವು ಭಾರತದಿಂದ ಕರ್ನಾಟಕವನ್ನು ಬೇರ್ಪಡಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.

ಈ ಸಂಬಂಧ ಭಾರತೀಯ ಮುಖ್ಯ ಚುನಾವಣಾ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎ.ಎನ್.ನಟರಾಜ್ ಗೌಡ, ಕಾನೂನು ವಿಭಾಗದ ಕಾರ್ಯದರ್ಶಿ ಸಂಜಯ್ ಯಾದವ್, ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಹಾಗೂ ಉಪಾಧ್ಯಕ್ಷ ದಿವಾಕರ್ ನಾರಾಯಣಸ್ವಾಮಿ ದೂರು ಸಲ್ಲಿಸಿದ್ದಾರೆ.

ರವಿವಾರ ನಂಜನಗೂಡಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ಮೊದಲ ಕುಟುಂಬ ಕರ್ನಾಟಕದ ಸಾರ್ವಭೌಮತ್ವವನ್ನು ಕಾಪಾಡುವುದಾಗಿ ಭರವಸೆ ನೀಡಿದೆ. ಆ ಮೂಲಕ ಕರ್ನಾಟಕವು ಭಾರತದ ಅವಿಭಾಜ್ಯ ಅಂಗವಲ್ಲ ಎಂಬುದನ್ನು ಬಹಿರಂಗವಾಗಿ ಹೇಳಿಕೆ ನೀಡಿದೆ ಎಂದಿದ್ದರು.

ಮೋದಿಯವರು ಸುಳ್ಳು, ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ. ಇವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

Similar News