×
Ad

ಡಿಕೆಶಿ ವಿರುದ್ಧ ಖರ್ಗೆಗೆ ದೂರು ಎಂಬ ನಕಲಿ ಪತ್ರ ವೈರಲ್: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

Update: 2023-05-09 00:47 IST

ಬೆಂಗಳೂರು: ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಲಾಗಿದೆ ಎಂಬ ನಕಲಿ ಪತ್ರವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಇದು ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ.

''ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು'' ಎಂದು ಮನವಿ ಮಾಡಿದ್ದಾರೆ. 

''ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ದ ಕ್ರಮ‌ಕೈಗೊಳ್ಳಲು ಒತ್ತಾಯಿಸಲಿದ್ದೇನೆ'' ಎಂದು ಎಚ್ಚರಿಸಿದ್ದಾರೆ.   

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ನಕಲಿ ಪತ್ರದಲ್ಲೇನಿದೆ?

'ಡಿಕೆ ಶಿವಕುಮಾರ್ ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ತೀವ್ರ ಅಸಮಾಧಾನವಿದೆ. ಡಿಕೆ ಶಿವಕುಮಾರ್ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜನರ ಮುಂದೆ ಘೋಷಣೆ ಕೂಗಿಸಿಕೊಳ್ಳುತ್ತಾ ನನ್ನ ಅಪಾರ ಅಭಿಮಾನಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಎಲ್ಲ ನಿರ್ಣಯವನ್ನು ಏಕಮುಖವಾಗಿ ತೆಗೆದುಕೊಳ್ಳುತ್ತಿದ್ದಾರೆ' ಎಂಬಿತ್ಯಾದಿ ವಿಚಾರಗಳು ನಕಲಿ ಪ್ರತದಲ್ಲಿವೆ.  

Similar News