ಪಂಜಾಬ್: ಅನಿಲ ಸೋರಿಕೆಯ ಶಂಕೆ: 24 ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ
ರೂಪನಗರ, ಮೇ 11: ಪಂಜಾಬ್ ನ ರೂಪನಗರದ ಕೈಗಾರಿಕಾ ಘಟಕವೊಂದರಲ್ಲಿ ಗುರುವಾರ ಸಂಭವಿಸಿದ ಸಂಕಿತ ಅನಿಲ ಸೋರಿಕೆಯ ಘಟನೆಯಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಖಾಸಗಿ ಶಾಲೆಯೊಂದರ 24 ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಗ್ಯ ಪರಿಸ್ಥಿತಿ ವಿಷಮಗೊಂಡ ಓರ್ವ ವಿದ್ಯಾರ್ಥಿಯನ್ನು ಚಂಡೀಗಡದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ಮೂಲಗಳು ತಿಳಿಸಿವೆ.
ನಂಗಾಲ್ ಪ್ರದೇಶದಲ್ಲಿ ಬೆಳಗ್ಗಿನ ವೇಳೆ ಈ ಘಟನೆ ನಡೆದಿದ್ದು, ಅಲ್ಲಿನ ಶಾಲೆಯೊಂದರ ವಿದ್ಯಾರ್ಥಿಗಲ್ಲಿ ಕೆಲವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕಂಡಿತ್ತು. ಕೂಡಲೇ ಶಾಲೆಯನ್ನು ಮುಚ್ಚಲಾಗಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತೆರಗೆ ದಾಖಲಿಸಲಾಗಿದೆ.
24 ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಅವರಲ್ಲಿ ಹೆಚ್ಚಿನವರನ್ನು ಬಿಡುಗಡೆಗೊಳಿಸಲಾಗಿದೆ. 4-5 ವಿದ್ಯಾರ್ಥಿಗಳನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ ರೂಪನಗರ ಉಪ ಪೊಲೀಸ್ ಆಯುಕ್ತೆ ಪ್ರೀತಿ ಯಾದವ್ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಪ್ರಾಥಮಿಕ ತನಿಖೆಗೆ ಪಂಜಾಬ್ ಮಾಲಿನ್ಯ ನಿಯಂತ್ರಣ ಮಂಡಳಿಯು ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯನ್ನು ರಚಿಸಿದೆ. ಪ್ರದೇಶದಲ್ಲಿರುವ ಕೈಗಾರಿಕಾ ಘಟಕವೊಂದರಲ್ಲಿ ಅನಿಲ ಸೋರಿಕೆಯಾಗಿರುವುದೇ ವಿದ್ಯಾರ್ಥಿಗಳ ಅಸ್ವಸ್ಥತೆಗೆ ಕಾರಣವೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದಾಗ್ಯೂ ಅನಿಲ ಸೋರಿಕೆಯಾಗಿರುವುದು ಇನ್ನೂ ದೃಢಪಟ್ಟಿಲ್ಲ ಮತ್ತು ಪರಿಸ್ಥಿತಿ ನಿಯಂತ್ರಣದಲ್ಲಿದೆಯೆಂದು ಪೊಲೀಸ್ ಉಪ ಆಯುಕ್ತರು ತಿಳಿಸಿದ್ದಾರೆ.