ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ತನಿಖೆಗೆ ವಿಶೇಷ ತಂಡ ರಚನೆ
Update: 2023-05-12 15:14 IST
ಹೊಸದಿಲ್ಲಿ: ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್(Brij Bhushan Singh) ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳದ ಆರೋಪದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಹಿಂದಿನ ಆದೇಶಕ್ಕೆ ಪ್ರತಿಕ್ರಿಯೆಯಾಗಿ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಮುಂದೆ ಸ್ಥಿತಿಗತಿ ವರದಿ ದಾಖಲೆ ಸಲ್ಲಿಸಲಾಗಿದೆ.
"ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ನಾವು ಎಸ್‌ಐಟಿ ರಚಿಸಿದ್ದೇವೆ. ಎಸ್‌ಐಟಿ ಪ್ರಕರಣದ ತನಿಖೆ ನಡೆಸಲಿದೆ. ಈ ವಿಷಯದಲ್ಲಿ ಸ್ಥಿತಿಗತಿ ವರದಿಯನ್ನು ಸಲ್ಲಿಸಲಾಗಿದೆ " ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ನ್ಯಾಯಾಲಯಕ್ಕೆ ತಿಳಿಸಿದರು,